ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ.
ವಿಜಯ ದರ್ಪಣ ನ್ಯೂಸ್….. ಬೆಂಗಳೂರು
ಲೋಕಸಭೆ ಚುನಾವಣೆ ಸೇರಿ ರಾಜ್ಯ, ರಾಷ್ಟ್ರ ರಾಜಕೀಯದ ಬಗ್ಗೆ ಸಮಾಲೋಚನೆ….
ಮೈಸೂರಿನಲ್ಲಿ ಓದಿನ ದಿನಗಳನ್ನು ಮೆಲುಕು ಹಾಕಿ ಕನ್ನಡಿಗರ ಪ್ರೀತಿ ಸ್ಮರಿಸಿದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ….
2024 ರಲ್ಲಿ ನಡೆಯುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಕರ್ನಾಟಕದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಗುರುವಾರ(ಜೂನ್ 15) ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ನಿಖಿಲ್ ಕುಮಾರಸ್ವಾಮಿ ರಾಜ್ಯ ಹಾಗೂ ರಾಷ್ಟ್ರೀಯ ರಾಜಕಾರಣ ಮತ್ತು ಭವಿಷ್ಯದ ರಾಜಕಾರಣ ವಿಚಾರವಾಗಿ ಚರ್ಚೆ ನಡೆಸಿದರು.
ಮುಂದಿನ ಲೋಕಸಭೆ ಚುನಾವಣೆ ಎದುರಿಸಲು ಅಖಿಲೇಶ್ ಯಾದವ್ ವಿಶೇಷ ಕಾರ್ಯಸೂಚಿಗಳನ್ನು ರೂಪಿಸಿಕೊಂಡಿದ್ದಾರೆ. ಈಗಿನಿಂದಲೇ ಚುನಾವಣೆಯ ಸಿದ್ಧತೆಗಳನ್ನು ಭರದಿಂದ ನಡೆಸಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಮಾಹಿತಿ ನೀಡಿದರು.
ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಸಮೀಕರಣಗಳ ಬಗ್ಗೆ ತಮ್ಮೊಂದಿಗೆ ಕೂಲಂಕಷವಾಗಿ ಚರ್ಚಿಸಿದ ಅಖಿಲೇಶ್ ಅಗತ್ಯ ಮಾಹಿತಿ ಕಲೆಹಾಕಿಕೊಂಡರು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು:
ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ ರಾಷ್ಟ್ರ ಮಟ್ಟದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಾಕಷ್ಟು ವಿಷಯಗಳನ್ನು ಅಖಿಲೇಶ್ ಯಾದವ್ ಅವರು ಚರ್ಚೆ ನಡೆಸಿದರು. ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡರು ಎಂದ ನಿಖಿಲ್ ಕುಮಾರಸ್ವಾಮಿ, ಭೂ ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡರ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಆರೋಗ್ಯದ ಬಗ್ಗೆ ಅಖಿಲೇಶ್ ಯಾದವ್ ಮಾಹಿತಿ ಪಡೆದುಕೊಂಡರು ಎಂದರು.
ಮೈಸೂರಿನ ದಿನಗಳ ಮೆಲುಕು
ಮೈಸೂರು ನಗರದಲ್ಲಿ ವಿದ್ಯಾಭ್ಯಾಸ ಮಾಡಿದ್ದ ದಿನಗಳನ್ನು ಅಖಿಲೇಶ್ ಯಾದವ್ ಸ್ಮರಿಸಿಕೊಂಡರು. ಕರ್ನಾಟಕ, ಕನ್ನಡಿಗರ ಬಗ್ಗೆ ತಮಗಿರುವ ಅಪಾರ ಗೌರವ, ಆದರಾಭಿಮಾನವನ್ನು ಹೃದಯಪೂರ್ವಕವಾಗಿ ವ್ಯಕ್ತಪಡಿಸಿದರು. ಇದಕ್ಕೆ ನಾನು ಅಭಿನಂದನೆ ಸಲ್ಲಿಸಿದೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.