ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಸಂಸದ ಬಿ.ಎನ್.ಬಚ್ಚೇಗೌಡ
ವಿಜಯ ದರ್ಪಣ ನ್ಯೂಸ್
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 17, ಪ್ರಸಕ್ತ ಸಾಲಿನಲ್ಲಿ ವಾಡಿಕೆ ಮಳೆಗಿಂತ ಅತೀ ಕಡಿಮೆ ಮಳೆಯಾಗಿದ್ದು, ಮುಂಬರುವ ದಿನಗಳಲ್ಲಿ ಕುಡಿಯುವ ನೀರು ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ಎನ್.ಬಚ್ಚೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ಮಳೆ ಪ್ರಮಾಣ ಅತೀ ಕಡಿಮೆಯಾಗಿದ್ದು ನಾಲ್ಕು ತಾಲ್ಲೂಕುಗಳನ್ನು ತೀವ್ರ ಬರ ತಾಲ್ಲೂಕು ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ಅಗತ್ಯವಿರುವ ವರದಿಯ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, ಕೇಂದ್ರ ತಂಡ ಜಿಲ್ಲೆಗೆ ಭೇಟಿ ನೀಡಿದಾಗ ಕಂದಾಯ, ಗ್ರಾಮೀಣಾಭಿವೃದ್ಧಿ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಇಲಾಖೆ ಅಧಿಕಾರಿಗಳು ಕೇಂದ್ರ ತಂಡಕ್ಕೆ ಮನವರಿಕೆ ಮಾಡಿಕೊಡಬೇಕು ಎಂದು ತಿಳಿಸಿದರು.
ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಉಂಟಾಗುತ್ತಿದ್ದು ಅವಶ್ಯವಾಗಿರುವ ಕುಡಿಯುವ ನೀರು ಪೂರೈಕೆ, ಜಾನುವಾರುಗಳಿಗೆ ಮೇವು ಪೂರೈಕೆ, ಆಹಾರ ಪೂರೈಸಲು ಅಗತ್ಯವಾದ ಸಿದ್ಧತೆಗಳನ್ನು ಕೈಗೊಳ್ಳಿ ಎಂದರು.
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿ ನಿರ್ಮಾಣವಾಗಬೇಕಾಗಿರುವ ಮನೆಗಳು, ನಿರ್ಮಾಣ ಹಂತದಲ್ಲಿರುವ ಮನೆಗಳನ್ನು ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಂಚಬೇಕು ಎಂದು ಹೇಳಿದರು.
ಕಂದಾಯ ಇಲಾಖೆಯಡಿ ಬರುವ ಕಂದಾಯ ಮನವಿಗಳು ಸೇರಿದಂತೆ ಸಕಾಲ ದಲ್ಲಿ ಸಲ್ಲಿಸುವ ಅರ್ಜಿಗಳನ್ನು ಶೀಘ್ರ ಇತ್ಯರ್ಥಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಸೂಚಿಸಿದರು.
ಶಾಲಾ ಕಾಲೇಜು ಕಟ್ಟಡ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ, ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಹಾಸ್ಟೆಲ್ ಕಟ್ಟಡಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿ ಬರುವ ಅಂಗನವಾಡಿ ಕಟ್ಟಡಗಳ ಕಾಮಗಾರಿಗಳು ಪೂರ್ಣಗೊಳಿಸಿ , ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಹೇಳಿದರು.
ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಹೊಸಕೋಟೆ ತಾಲ್ಲೂಕಿನ ಕನ್ನಹಳ್ಳಿಯಲ್ಲಿ ನಿರ್ಮಾಣ ಹಂತದಲ್ಲಿರುವ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾಮಗಾರಿಯು ವಿಳಂಬವಾಗುತ್ತಿದ್ದು, ಇದರಿಂದಾಗಿ ಕಾಮಗಾರಿ ವೆಚ್ಚವು ಹೆಚ್ಚಾಗಲಿದೆ. ಸಂಬಂಧಿಸಿದ ಅಧಿಕಾರಿಗಳು ಶೀಘ್ರವಾಗಿ ಕಾಮಗಾರಿ ಮುಗಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ನೀಗಿಸಲು ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವಂತೆ ಸಂಸದರು ನಿರ್ದೇಶಿಸಿದರಲ್ಲದೆ, ಗ್ರಾಮೀಣ ಪ್ರದೇಶದಲ್ಲಿ ವಸತಿರಹಿತರಿಗೆ ನಿವೇಶನ ಗುರುತಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಅಕ್ಷರ ದಾಸೋಹ ಯೋಜನೆಯಡಿ 72402 ಶಾಲಾ ಮಕ್ಕಳಿಗೆ ಹಾಲು, ಬಾಳೆಹಣ್ಣು, ಮೊಟ್ಟೆ ಬಿಸಿಯೂಟ ನೀಡಲಾಗುತ್ತಿದ್ದು ಇದರಿಂದಾಗಿ ಶಾಲಾ ಮಕ್ಕಳ ಹಾಜರಾತಿ ಹೆಚ್ಚಳಗೊಂಡಿದೆ ಎಂದು ಶಿಕ್ಷಣ ಹಾಗೂ ಅಕ್ಷರ ದಾಸೋಹ ಅಧಿಕಾರಿ ಅವರು ಸಭೆಗೆ ಮಾಹಿತಿ ನೀಡಿದರು.
ಜಲಜೀವನ್ ಮಿಷನ್ ಯೋಜನೆ ಅಡಿ ಕೈಗೊಂಡಿರುವ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಿ ಎಂದರಲ್ಲದೆ ಪ್ರತಿಯೊಂದು ಗ್ರಾಮಕ್ಕೂ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಹೇಳಿದರು.
ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ನಿಗಮಗಳಲ್ಲಿ ಬರುವಂತಹ ಗಂಗ ಕಲ್ಯಾಣ ಯೋಜನೆಯನ್ನು ಶೀಘ್ರವೇ ಅನುಷ್ಠಾನಕ್ಕೆ ತಂದು ಫಲಾನುಭವಿಗಳಿಗೆ ತಲುಪಿಸಿ ಎಂದರು.
ಸರ್ಕಾರಿ ಯೋಜನೆಗಳನ್ನು ವಿಳಂಬ ಮಾಡದೆ ಶೀಘ್ರವೇ ಅನುಷ್ಠಾನಕ್ಕೆ ತರಬೇಕು, ಅಧಿಕಾರಿಗಳು ಸಮಯಪ್ರಜ್ಞೆ ಪಾಲಿಸಿ ಕರ್ತವ್ಯವನ್ನು ಜವಾಬ್ದಾರಿಯಾಗಿ ನಿರ್ವಹಿಸಬೇಕು. ಜಿಲ್ಲೆಯನ್ನು ಎಲ್ಲಾ ವಿಧದಲ್ಲೂ ಮೊದಲ ಸ್ಥಾನಕ್ಕೆ ಕೊಂಡೊಯ್ಯಲು ಶ್ರಮವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಅನುರಾಧ ಕೆ.ಎನ್, ಉಪ ಕಾರ್ಯದರ್ಶಿ ರಮೇಶ್, ಉಪವಿಭಾಗಾಧಿಕಾರಿ ಶ್ರೀನಿವಾಸ್ ಸೇರಿದಂತೆ ದಿಶಾ ಸಮಿತಿಯ ನಾಮನಿರ್ದೇಶಿತ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್ಗಳು, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.