ಸಂವಿಧಾನ ಆಶಯಗಳನ್ನು ಪಾಲಿಸೋಣ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ವಿಜಯ ದರ್ಪಣ ನ್ಯೂಸ್…

ಜಿಲ್ಲಾಡಳಿತ ಭವನದಲ್ಲಿ “ಸಂವಿಧಾನ ದಿನ” ಆಚರಣೆ

ಸಂವಿಧಾನ ಆಶಯಗಳನ್ನು ಪಾಲಿಸೋಣ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ. ಜಿಲ್ಲೆ, ನ.26  :- ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ *ಸಂವಿಧಾನ ದಿನ* ವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರ ಹಾಗೂ ಸಂವಿಧಾನ ಪೀಠಿಕೆಗೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸಿ ಮಾತನಾಡಿದ ಜಿಲ್ಲಾಧಿಕಾರಿಯವರು, ನಮ್ಮ ಸಂವಿಧಾನ ವಿಶ್ವದಲ್ಲೇ ದೊಡ್ಡ ಲಿಖಿತ ಸಂವಿಧಾನ. ಇದರ ಆಶಯವನ್ನು ತಿಳಿದು ಮೂಲಭೂತ ಹಕ್ಕು ಪಡೆದು, ಕರ್ತವ್ಯಗಳನ್ನು ಪ್ರತಿಯೊಬ್ಬ ಭಾರತೀಯರು ಪಾಲನೆ ಮಾಡಬೇಕಿದೆ ಎಂದು ಹೇಳಿದರು.

ಸಂವಿಧಾನ ಎಲ್ಲ ವರ್ಗದ ಜನರಿಗೆ ಸಮಾನತೆಯನ್ನು ಒದಗಿಸುವ ಜತೆಗೆ ತಾರತಮ್ಯ ತೊಡೆದುಹಾಕಲು ನೂರಾರು ಕಾನೂನುಗಳನ್ನು ರೂಪಿಸಿದ ಬೃಹತ್ ಮಾದರಿ ಸಂವಿಧಾನವಾಗಿ ನಿಂತಿದೆ ಎಂದರು.

ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿ ಡಾ. ಬಿ.ಆರ್ ಅಂಬೇಡ್ಕರ್ ರವರು ಹತ್ತಾರು ದೇಶ ಸುತ್ತಿ ಅಲ್ಲಿನ ಕಾನೂನಿನ ಸಮಗ್ರ ಅಧ್ಯಯನ ಮಾಡಿ, ಅನ್ಯದೇಶಗಳು ಮೆಚ್ಚಿಕೊಳ್ಳುವಂತ ಭಾರತೀಯ ಸಂವಿಧಾನದ ಕೊಡುಗೆ ನೀಡಿದ್ದಾರೆ ಎಂದರು.

ಕಾರ್ಯಕ್ರಮದ‌‌ಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಪ್ರೇಮಾ ಟಿ.ಎಸ್.ಎಲ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.