ಮಕ್ಕಳು ರಾಷ್ಟ್ರದ ಆಸ್ತಿ, ಮಕ್ಕಳ ರಕ್ಷಣೆ ನಮ್ಮ ಜವಾಬ್ದಾರಿ: ಕೆ.ನಾಗಣ್ಣ ಗೌಡ.

ವಿಜಯ ದರ್ಪಣ ನ್ಯೂಸ್

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ :- ಇಂದಿನ ಮಕ್ಕಳು ಮುಂದಿನ ಪ್ರಜೆಗಳು, ಮಕ್ಕಳು ದೇಶದ ಆಸ್ತಿ, ಮಕ್ಕಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಅವರು ಹೇಳಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಯ ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ “ಮಕ್ಕಳ ಹಕ್ಕುಗಳು ಮತ್ತು ಕಾನೂನು ಕುರಿತು ಜಿಲ್ಲಾ ಮಟ್ಟದ ಒಂದು ದಿನದ ತರಬೇತಿ ಕಾರ್ಯಗಾರ”ದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸುವುದರಿಂದ ಮುಂದಿನ ದಿನಗಳಲ್ಲಿ ದೇಶದ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡುತ್ತಾರೆ. ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಹೊಸ ಹೊಸ ಕಾನೂನುಗಳು ಬರುತ್ತದೆ, ಕಾನೂನುಗಳು ತಿದ್ದುಪಡಿ ಆಗುತ್ತದೆ. ಆ ಕಾನೂನುಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಲು ಕಾಲಕಾಲಕ್ಕೆ ಕಾರ್ಯಾಗಾರಗಳನ್ನು ಏರ್ಪಡಿಸಲಾಗುತ್ತದೆ ಎಂದು ಅವರು ಹೇಳಿದರು.

ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅಧ್ಯಕ್ಷರು 18 ವರ್ಷದೊಳಗಿನ ಹೆಣ್ಣು ಮಕ್ಕಳು, 21 ವರ್ಷದೊಳಗಿನ ಗಂಡು ಮಕ್ಕಳಿಗೆ ವಿವಾಹವಾದರೆ ಅದು ಬಾಲ್ಯ ವಿವಾಹವಾಗುತ್ತದೆ. ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಅಡಿಯಲ್ಲಿ ಕಾನೂನಿನ ಮೂಲಕ ಶಿಕ್ಷೆ ವಿಧಿಸಲು ಅವಕಾಶವಿದೆ. ಬಾಲ್ಯ ವಿವಾಹ ಆಗುವುದರಿಂದ ದೈಹಿಕವಾಗಿ, ಮಾನಸಿಕವಾಗಿ, ಕೌಟುಂಬಿಕವಾಗಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಬಡತನ, ಮೂಢನಂಬಿಕೆ ಮುಂತಾದ ಕಾರಣಗಳಿಂದ ಬಾಲ್ಯ ವಿವಾಹ ಮಾಡುತ್ತಾರೆ. ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ. ಬಾಲ್ಯ ವಿವಾಹ ತಡೆಯಲು ಶಿಕ್ಷಣ ಪ್ರಮುಖ ಅಸ್ತ್ರ, ಶಿಕ್ಷಣದ ಅರಿವು, ಜ್ಞಾನ ಬೆಳೆಸುತ್ತದೆ. ಶಿಕ್ಷಕರು ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಪರಿಶೀಲಿಸಿ ಹಾಗೂ ಪೋಷಕರ ಸಭೆಯನ್ನು ಕಾಲಕಾಲಕ್ಕೆ ನಡೆಸಿ ಮಕ್ಕಳ ಚಲನವಲನ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದರು.

ಬಾಲ್ಯ ವಿವಾಹ, ಮಕ್ಕಳ ಮೇಲಿನ ದೌರ್ಜನ್ಯಗಳು ಕಂಡುಬಂದಲ್ಲಿ ದೂರವಾಣಿ ಸಂಖ್ಯೆ 112 ಅಥವಾ ಚೈಲ್ಡ್ ಲೈನ್ 1098 ಗೆ ಉಚಿತ ದೂರವಾಣಿ ಕರೆ ಮಾಡಿ ದೂರು ನೀಡಿ ಅಥವಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ದೂರವಾಣಿ ಸಂಖ್ಯೆಗೆ 080-29560034 ಗೆ ಕರೆ ಮಾಡಿ ದೂರು ನೀಡಬಹುದು ಎಂದು ಅಧ್ಯಕ್ಷರು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ ವಿವಿಧ ಕಾರಣಗಳಿಂದ ಮಕ್ಕಳ ಮೇಲೆ ದೌರ್ಜನ್ಯಗಳು ಆಗುತ್ತಿವೆ. ಕಾನೂನು ಅಡಿಯಲ್ಲಿ ಮಕ್ಕಳ ರಕ್ಷಣೆ ಆಗಬೇಕು. ದೌರ್ಜನ್ಯ ಎಸಗುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಮಕ್ಕಳ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಪ್ರಾಸ್ತಾವಿಕ ಮಾತನಾಡಿದರು.ς

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿದ್ದ ಪೋಲಿಸ್ ಮಹಾನಿರ್ದೇಶಕ ಕಚೇರಿಯ ಪೋಲಿಸ್ ತರಬೇತಿದಾರ ರೋಹಿತ್ ಸಿ‌ ಜೆ ಅವರು ಬಾಲನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ- 2015, ಪೋಕ್ಸೋ ಕಾಯ್ದೆ-2012 ಬಗ್ಗೆ ಮಾಹಿತಿ ನೀಡಿದರು.
ಕಾರ್ಯಾಗಾರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರಾಮ ಮಲ್ಲಯ್ಯ, ಹೊಸಕೋಟೆ ವಿಭಾಗದ ಡಿ.ವೈ.ಎಸ್.ಪಿ ಪಾಟೀಲ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಅನಿತಾ ಲಕ್ಷ್ಮೀ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನಿಲ್ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೃಷ್ಣಮೂರ್ತಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಪೋಲಿಸ್ ಇಲಾಖೆ ಸಿಬ್ಬಂದಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

&&&&&&&&&&&&&&&&&&&&&&&&&&&&

 ಸವಿನೆನಪು .

ಅಪೂರ್ಣ ಪ್ರೇಮ ಸಾವಿರದ
ಸವಿ ನೆನಪು
ಕತ್ತಲ ಕವಿದ ಹಿತ್ತಲ ಬಾವಿಯ ಮಲ್ಲಿಗೆ ಚಪ್ಪರ ಮತ್ತೇರಿಸಿದ ದಿನ

ದಿಗಂತದ ಚುಕ್ಕಿಗೆ ಹಿಲಾಲು ನಿನ್ನ ಮಾಧಕ ನಗು
ಅಂದೇ ಪ್ರೀತಿ ಗರ್ಭಕಟ್ಟಿ ಊರತುಂಬ ಗೋಳಗುಮ್ಮಟದ
ಪಿಸು ಮಾತಿನ ಮೊಗ ಶಾಲೆ

ಹೊಳೆಯ ಮರಳರಾಶಿ ಮೇಲನ
ಹೆಸರದು ಪ್ರವಾಹದ ಪಾಲು
ಇಬ್ಬರೆದೆಯ ಕಡಲೊಳು ಸಾವಿರ ಸಾವಿರ ಸುನಾಮಿ

ಆ ದಿನ ರಾತ್ರಿ ಸುರೆಯು ಅಮೇರಲಿಲ್ಲ ನೀರು ಕಣ್ಣೀರ ಕಲಬೆರಕೆ
ಆ ದಿನ ಸೋತ ಪ್ರೇಮವು
ಈ ದಿನ ಸವಿನೆಪು

ನೋವು ” ಸಾಯದ ಕವನ
ನೆನಪು ಸಾವಿನತನ ಸವೆಯದ ವನ
ಮನ ಮೇಲುಕು ಹಾಕುವ ದನ.

ಚಂದ್ರಶೇಖರ ಹಡಪದ. ಜಿಲ್ಲಾಧ್ಯಕ್ಷ                ಬರೆಹಗಾರರ ಬಳಗ ಬೆಂಗಳೂರ ಗ್ರಾಮಾಂತರ