ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಿ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್

ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಿ: ಸಚಿವ ಕೆ.ಹೆಚ್ ಮುನಿಯಪ್ಪ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 02 :- ಬರಗಾಲ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಜನ ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ, ಆಹಾರ ಸರಬರಾಜು, ಮೇವು ಪೂರೈಕೆ, ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿ ಯಾವುದೇ ಸಮಸ್ಯೆ ಆಗದಂತೆ ಕ್ರಮ ವಹಿಸಿ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.


ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ಭವನದ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸ್ತುತ ವರ್ಷ ಜಿಲ್ಲೆಯಾದ್ಯಂತ ಬರಗಾಲ ಎದುರಾಗಿದ್ದು ಜನ ಜಾನುವಾರುಗಳಿಗೆ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಸಮಸ್ಯೆ ಕಂಡುಬರುವುದಿಲ್ಲ, ಮುಂಜಾಗ್ರತಾವಾಗಿ ಜನರಿಗೆ ಕುಡಿಯುವ ನೀರು ಸಮಸ್ಯೆ ಆಗದಂತೆ ಕ್ರಮ ವಹಿಸಿ, ಜಲ ಜೀವನ್ ಮಿಷನ್ ಯೋಜನೆಯಡಿ ಕೊರೆದಿರುವ ಕೊಳವೆಬಾವಿಗಳಿಗೆ ತಕ್ಷಣವೇ ವಿದ್ಯುತ್ ಸಂಪರ್ಕ ಕಲ್ಪಿಸಿ, ಮೋಟಾರ್ ಪಂಪ್ ಅಳವಡಿಸಿ ನೀರು ಪೂರೈಸಿ. ಖಾಸಗಿ ಕೊಳವೆಬಾವಿ ಹಾಗೂ ನೀರಿನ ಟ್ಯಾಂಕರ್ ಗಳನ್ನು ಅತಿ ಅವಶ್ಯಕತೆ ಇದ್ದಾಗ ಮಾತ್ರ ಬಳಸಿಕೊಳ್ಳಿ. ಜಿಲ್ಲೆಯ ಯಾವುದೇ ಗ್ರಾಮ, ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ, ಜಾನುವಾರುಗಳಿಗೆ ಮೇವು ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಇರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರುವುದನ್ನು ಪರಿಶೀಲನೆ ಮಾಡಿ.ಅಗತ್ಯ ಇರುವ ಸ್ಥಳದಲ್ಲಿ ಹೊಸದಾಗಿ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಿ ಎಂದರು.

ಕೃಷಿ, ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿ, ಬೆಳೆ ಪರಿಹಾರವನ್ನು ಅರ್ಹ ರೈತರಿಗೆ ತಲುಪಿಸಬೇಕು. ಬೆಳೆ ವಿಮೆ ಯೋಜನೆ ಅಡಿ ನೋಂದಾಯಿತ ರೈತರಿಗೆ ಪ್ರೋತ್ಸಾಹ ನೀಡಿ. ರೇಷ್ಮೆ ಬೆಳೆಯನ್ನು ವಿಮಾ ಯೋಜನೆಗೆ ಸೇರಿಸಲು ಕ್ರಮ ವಹಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಆಂಬುಲೆನ್ಸ್ ಸೇವೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಜನರ ಆರೋಗ್ಯ ಹಿತದೃಷ್ಟಿಯಿಂದ ಸಮರ್ಪಕ ಔಷಧಿಗಳು ಎಲ್ಲಾ ಪ್ರಾಥಮಿಕ, ಸಮುದಾಯ, ತಾಲ್ಲೂಕು ಆಸ್ಪತ್ರೆಗೆಳಲ್ಲಿ ಶೇಖರಿಸಿಡಲು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನಿರ್ಮಾಣವಾಗಿರುವ ಘನತ್ಯಾಜ್ಯ ವಿಲೇವಾರಿ ಘಟಕಗಳಲ್ಲಿ ಸರಿಯಾದ ರೀತಿಯಲ್ಲಿ ಕಸ ವಿಲೇವಾರಿ ಆಗಬೇಕು. ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಕಸ ಸುರಿಯುವವರ ವಿರುದ್ಧ ಕ್ರಮ ಕೈಗೊಳ್ಳಿ. ಅವಶ್ಯವಿದ್ದಲ್ಲಿ ಸಿ.ಸಿ ಕ್ಯಾಮರಾ ಅಳವಡಿಸಿ ಎಂದರು.

ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ರೈತರು ಜಮೀನು ಸರ್ವೆ ಕಾರ್ಯ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಿ. ಜಿಲ್ಲೆಯನ್ನು 6 ತಿಂಗಳಲ್ಲಿ ಪೋಡಿ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು. ಇದಕ್ಕಾಗಿ ಕಂದಾಯ ಸಚಿವರ ಜೊತೆ ಸಭೆ ನಡೆಸಿ ಅಗತ್ಯ ಸಹಕಾರ ಕೋರಲಾಗುವುದು ಎಂದರು.

ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳ ಜಾಗಕ್ಕೆ ಸೂಕ್ತ ಬಂದೋಬಸ್ತ್ ಮಾಡಬೇಕಿದ್ದು, ಒಂದು ತಿಂಗಳ ಒಳಗಾಗಿ ಸರ್ವೆ ಕಾರ್ಯ ನಡೆಸಿ ,ಒತ್ತುವರಿ ಆಗಿದಲ್ಲಿ ತೆರವುಗೊಳಿಸಿ ಕಲ್ಲು ಹಾಕಿಸಿ ಎಂದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರಲು ಅಗತ್ಯ ಕ್ರಮ ವಹಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದರು.

ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ 202289 ಫಲಾನುಭವಿಗಳಿಗೆ ರೂ. 11,81,37,760 ಇದುವರೆಗೆ ಹಣ ಜಮೆಯಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 202878 ಫಲಾನುಭವಿಗಳು ನೋಂದಣಿ ಆಗಿದ್ದು ಶೇಕಡ 90% ಪ್ರಗತಿ ಸಾಧಿಸಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ನೆಲಮಂಗಲ ವಿಭಾಗದಲ್ಲಿ 337531 ಫಲಾನುಭವಿಗಳು ನೋಂದಣಿಯಾಗಿದ್ದಾರೆ. ಯುವನಿಧಿ ಯೋಜನೆಯಡಿ 1854 ಫಲಾನುಭವಿಗಳು ನೋಂದಣಿಯಾಗಿದ್ದಾರೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದರು. ಅರ್ಹ ಫಲಾನುಭವಿಗಳಲ್ಲಿರುವ ದಾಖಲೆಗಳ ನ್ಯೂನ್ಯತೆ ಸರಿಪಡಿಸಿ ಗ್ಯಾರಂಟಿ ಯೋಜನೆಗಳನ್ನು ಪ್ರತಿ ಅರ್ಹ ಫಲಾನುಭವಿಗೆ ತಲುಪಿಸಬೇಕು ಎಂದರು.

ಸಭೆಯಲ್ಲಿ ಕಿಯೋನಿಕ್ಸ್ ಅಧ್ಯಕ್ಷರು ಹಾಗೂ ಹೊಸಕೋಟೆ ಶಾಸಕ ಶರತ್ ಕುಮಾರ್ ಬಚ್ಚೇಗೌಡ, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ವಿಧಾನಪರಿಷತ್ ಸದಸ್ಯ ರವಿ, ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ, ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ.ಎನ್, ಸಚಿವರ ಆಪ್ತ ಕಾರ್ಯದರ್ಶಿ ಡಾ. ಹೆಚ್.ನಟರಾಜ್, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಅಪರ ಪೋಲಿಸ್ ವರಿಷ್ಠಾಧಿಕಾರಿ ಪುರುಷೋತ್ತಮ್, ಜಿಲ್ಲಾಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.