ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಾಗಿ ಕೆಲಸ ಮಾಡೋಣ: ಜಿಲ್ಲಾಧಿಕಾರಿ ಎನ್ ರವೀಂದ್ರ
ವಿಜಯ ದರ್ಪಣ ನ್ಯೂಸ್
ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಾಗಿ ಕೆಲಸ ಮಾಡೋಣ: ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 9 :- ಮುಂಬರುವ ಲೋಕಸಭಾ ಚುನಾವಣೆಯನ್ನು ಅಧಿಕಾರಿಗಳ ಸಮನ್ವಯತೆ, ಸಹಕಾರದೊಂದಿಗೆ ಒಟ್ಟಾಗಿ ಕೆಲಸ ಮಾಡೊಣ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಇಂದು ನಡೆದ ಮುಂಬರುವ ಲೋಕಸಭಾ ಚುನಾವಣೆಯ ಪೂರ್ವ ತಯಾರಿ ಕುರಿತ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 08 ವಿಧಾನಸಭಾ ಕ್ಷೇತ್ರಗಳು ಒಳಪಡುತ್ತವೆ. ಚಿಕ್ಕಬಳ್ಳಾಪುರ ಜಿಲ್ಲೆಯ 3 ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕು ಹಾಗೂ ಬೆಂಗಳೂರು ನಗರ ಜಿಲ್ಲೆಯ ಯಲಹಂಕ ಕ್ಷೇತ್ರ ಬರುತ್ತದೆ. ಈ 8 ಕ್ಷೇತ್ರಗಳಿಗೆ ಚಿಕ್ಕಬಳ್ಳಾಪುರ ಕೇಂದ್ರ ಸ್ಥಾನವಾಗಿದೆ. ಹೀಗಾಗಿ ಇಂದಿನ ಸಭೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕು ಹಾಗೂ ಯಲಹಂಕ ಕ್ಷೇತ್ರದ ಚುನಾವಣೆ ಅಧಿಕಾರಿಗಳ ಸಹಕಾರ ಸಭೆ ಇದಾಗಿದ್ದು. ಚುನಾವಣೆ ಯಶಸ್ವಿಯಾಗಿ ನಡೆಯಲು ನಿಮ್ಮೆಲ್ಲರ ಸಹಕಾರ ಅಗತ್ಯ, ಎಲ್ಲರು ಜೊತೆಯಾಗಿ ಕೆಲಸ ಮಾಡೋಣ ಎಂದರು.
ಚುನಾವಣೆಗೆ ಈಗಾಗಲೆ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಅಧಿಕಾರಿಗಳು ಪ್ರತಿಯೊಂದು ಮತಗಟ್ಟೆಯ ಸ್ಥಿತಿಗತಿ ಪರಿಶೀಲಿಸಿ, ಎಲ್ಲಾ ಮತಗಟ್ಟೆಗಳ ಮಾಹಿತಿ ಪಡೆದಿರಬೇಕು. ಮತದಾರರ ಪಟ್ಟಿ, ಮತಗಟ್ಟೆಗಳ ವಿವರ ಕರ್ತವ್ಯ ನಿರತ ಅಧಿಕಾರಿಗಳಿಗೆ ತಿಳಿದಿರಬೇಕು. ಎಂ.ಸಿ.ಸಿ, ಎಫ್.ಎಸ್.ಟಿ, ವಿ.ವಿ.ಟಿ ಟೀಮ್, ರಿಟರ್ನಿಂಗ್ ಆಫೀಸರ್ ಗಳಿಗೆ ಹೆಚ್ಚಿನ ಜವಾಬ್ದಾರಿ ಇರುತ್ತದೆ. ಇ.ವಿ.ಎಂ ಮಿಷನ್ಗಳ ಭದ್ರತೆ, ಚೆಕ್ ಪೋಸ್ಟ್ ಗಳ ಪರಿಶೀಲನೆ, ಸೂಕ್ಷ್ಮ ಮತಗಟ್ಟೆಗಳ ಬಗ್ಗೆ ಹೆಚ್ಚಿನ ಗಮನ ಹರಿಸಿ. ಸಮರ್ಪಕವಾಗಿ, ಪಾರದರ್ಶಕವಾಗಿ, ನಿಷ್ಪಕ್ಷಪಾತವಾಗಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಪಿ.ಎನ್ ರವೀಂದ್ರ ಅವರು ಹೇಳಿದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ ಅವರು ಮಾತನಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವುದರಿಂದ ಹೆಚ್ಚಿನ ಜವಾಬ್ದಾರಿ ನಮ್ಮ ಮೇಲಿದೆ. ಜಿಲ್ಲೆಯಲ್ಲಿ ಚುನಾವಣೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದೇವೆ. ಅಧಿಕಾರಿಗಳಿಗೆ ವಿವಿಧ ಹಂತದಲ್ಲಿ ತರಬೇತಿ ನೀಡಲಾಗಿದೆ. ಜಿಲ್ಲೆಯ ಪ್ರತಿಯೊಂದು ಮತಗಟ್ಟೆಯ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿ ಎಂದು ಮತ್ತೊಮ್ಮೆ ಅಧಿಕಾರಿಗಳಿಗೆ ಸೂಚಿಸಿದರು.
ಯಾವ ಸಂದರ್ಭದಲ್ಲಿ ಬೇಕಾದರೂ ಚುನಾವಣೆ ಘೋಷಣೆ ಆಗಬಹುದು. ನಾವೆಲ್ಲರೂ ಸನ್ನದ್ಧರಾಗಿ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ನೆರವು ನೀಡಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಎನ್ ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಚಿಕ್ಕಬಳ್ಳಾಪುರ ಅಪರ ಜಿಲ್ಲಾಧಿಕಾರಿ ಡಾ.ಎನ್ ತಿಪ್ಪೇಸ್ವಾಮಿ, ಬೆಂಗಳೂರು ಗ್ರಾಮಾಂತರ ಜಿಲ್ಲಯ ಚುನಾವಣಾಧಿಕಾರಿಗಳು, ತಹಶೀಲ್ದಾರ್ ಗಳು, ಕಾರ್ಯನಿರ್ವಾಹಕ ಅಧಿಕಾರಿಗಳು, ಡಿವೈಎಸ್ಪಿ ಗಳು ಸೇರಿದಂತೆ ಇತರೆ ಚುನಾವಣೆ ಸಿಬ್ಬಂದಿ ಉಪಸ್ಥಿತರಿದ್ದರು.