ಚುನಾವಣಾ ವೆಚ್ಚಗಳ ಬಗ್ಗೆ ಕಟ್ಟುನಿಟ್ಟಿನ ನಿಗಾ ವಹಿಸಿ:ದೆಬಾಶಿಶ್ ಮಜುಮ್ ದಾರ್
ವಿಜಯ ದರ್ಪಣ ನ್ಯೂಸ್
ಲೋಕಸಭಾ ಸಾರ್ವತ್ರಿಕ ಚುನಾವಣೆ-2024
27-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ
ಚುನಾವಣಾ ವೆಚ್ಚಗಳ ಬಗ್ಗೆ ಕಟ್ಟುನಿಟ್ಟಿನ ನಿಗಾ ವಹಿಸಿ:ದೆಬಾಶಿಶ್ ಮಜುಮ್ ದಾರ್
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 28 : ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ವೆಚ್ಚಗಳ ಬಗ್ಗೆ ಕಟ್ಟುನಿಟ್ಟಿನ ನಿಗಾ ವಹಿಸಿ ಸೂಕ್ತ ಸಮಯಕ್ಕೆ ವರದಿ ನೀಡುವಂತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ದೆಬಾಶಿಶ್ ಮಜುಮ್ ದಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತಿಯ ಸರ್.ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಚುನಾವಣೆ ವೆಚ್ಚ ವೀಕ್ಷಣೆ ಸಂಬಂಧ ಇಂದು ನಡೆದ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ದೃಷ್ಟಿಕೋನದಲ್ಲಿ ನಾವೆಲ್ಲರೂ ಕೆಲಸ ಮಾಡಬೇಕು. ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಿ. ದಾಖಲೆ ಇಲ್ಲದೆ ವಶಪಡಿಸಿಕೊಂಡ ನಗದು ಹಾಗೂ ಇತರೆ ವಸ್ತುಗಳ ಬಗ್ಗೆ ಪ್ರತಿದಿನ ವರದಿ ನೀಡಿ. ಅಬಕಾರಿ ಅಕ್ರಮಗಳು, ನಗದು ಸಾಗಾಟ, ಸುದ್ದಿ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರವಾಗುವ ಜಾಹಿರಾತು, ಸಭೆ ಸಮಾರಂಭಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ ಎಂದು ಅವರು ಹೇಳಿದರು.
ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ. ಚುನಾವಣೆ ಕರ್ತವ್ಯಕ್ಕೆ ಸಂಬಂಧಿಸಿದಂತೆ ಪ್ರತಿಯೊಂದು ದಾಖಲಾತಿ ಇರಬೇಕು. ಪ್ರತಿದಿನ ಚುನಾವಣೆ ವೆಚ್ಚದ ವರದಿ ನೀಡಿ. ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೈಗೊಂಡಿರುವ ಚುನಾವಣೆ ಸಿದ್ಧತೆಗಳನ್ನು ಚುನಾವಣಾ ವೆಚ್ಚ ವೀಕ್ಷಕರು ಶ್ಲಾಘಿಸಿದರು.
ಸಭೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಸಹಾಯಕ ಚುನಾವಣಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ, ಚಿಕ್ಕಬಳ್ಳಾಪುರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ನಾಗೇಶ್ ಡಿ.ಎಲ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಚುನಾವಣಾಧಿಕಾರಿಗಳು, ಇತರರು ಉಪಸ್ಥಿತರಿದ್ದರು.