ತಂಬಾಕು ಉತ್ಪನ್ನಗಳಿಂದ ಮಕ್ಕಳನ್ನು ದೂರವಿಡಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ 

ವಿಜಯ ದರ್ಪಣ ನ್ಯೂಸ್…

ತಂಬಾಕು ಉತ್ಪನ್ನಗಳಿಂದ ಮಕ್ಕಳನ್ನು ದೂರವಿಡಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ 

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್. 19:- ತಂಬಾಕು ಉತ್ಪನ್ನಗಳಿಂದ ಆಗುವಂತ ದುಷ್ಪರಿಣಾಮಗಳ ಕುರಿತು ಮಕ್ಕಳಲ್ಲಿ ಹೆಚ್ಚಾಗಿ ಜಾಗೃತಿಯ ಕಾರ್ಯಕ್ರಮ ಮೂಡಿಸುವದು ಅತ್ಯವಶ್ಯವಿದೆ. ಅಲ್ಲದೇ ಪ್ರತಿಯೊಬ್ಬ ವ್ಯಕ್ತಿಗೂ ತಂಬಾಕು ಉತ್ಪನ್ನಗಳಿಂದ ಸಂಭವಿಸುವಂತ ಅನಾರೋಗ್ಯಗಳ ಕುರಿತು ಅರಿವು ಇರಬೇಕು, ದೂರವೀರಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಹೇಳಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಶಿಕ್ಷಣ ಸಂವಹನ ವಿಭಾಗ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಂಯುಕ್ತಾಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ‘ತಂಬಾಕು ಉದ್ಯಮದ ಹಸ್ತಕ್ಷೇಪದಿಂದ ಮಕ್ಕಳನ್ನು ರಕ್ಷಿಸುವುದು’ ಎಂಬ ಘೋಷವಾಕ್ಯದೊಂದಿಗೆ ಮಂಗಳವಾರದಂದು ನಡೆದ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿಯನ್ನು ಭೋಧಿಸಿ ಅವರು ಮಾತನಾಡಿದರು.

ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಮೇ 31 ರಿಂದ ಜೂನ್ 30 ರ ವರೆಗೆ ಜಿಲ್ಲೆಯಲ್ಲಿ ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಶಾಲೆ ಹಾಗೂ ಕಾಲೇಜುಗಲ್ಲಿ ವಿದ್ಯಾರ್ಥಿಗಳಿಗೆ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳು ಮತ್ತು ಕೋಟ್ಟಾ ಕಾಯ್ದೆಯ ಬಗ್ಗೆ ಅರಿವು ಮೂಡಿಸಲಾಯಿತು.

ಪೋಲೀಸ್ ಇಲಾಖೆಯ ಸಿಬ್ಬಂದಿಗಳು ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳು ಮತ್ತು ಕೋಟ್ಟಾ ಕಾಯ್ದೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಹಾಗೂ ಜಿಲ್ಲೆಯಲ್ಲಿ ಕೋಟ್ಟಾ ಕಾಯ್ದೆಯ ಉನ್ನತ ಅನುಷ್ಠಾನಕ್ಕಾಗಿ ಜಿಲ್ಲೆಯ 4 ತಾಲ್ಲೂಕುಗಳಾದ ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ, ಹೊಸಕೋಟೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಆರಕ್ಷಕ ಠಾಣಾ ವ್ಯಾಪ್ತಿಯಲ್ಲಿ ಜೂನ್ ತಿಂಗಳಲ್ಲಿ ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ಆಸ್ಪತ್ರೆ, ಸರ್ಕಾರಿ ಕಛೇರಿಗಳ ಆವರಣಗಳು ಮತ್ತು ಎಲ್ಲಾ ಶೈಕ್ಷಣಿಕ ಸಂಸ್ಥೆಗಳ ಸುತ್ತ ನಿರಂತರವಾಗಿ ಕೋಟ್ಟಾ ದಾಳಿಗಳನ್ನು ನಡೆಸಿ ಹೆಚ್ಚು ಪ್ರಕರಣಗಳನ್ನು ದಾಖಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುನೀಲ್ ಕುಮಾರ್, ಜಿಲ್ಲಾ ಆಯುಷ್ಯಾಧಿಕಾರಿ ಡಾ. ಶುಹಬುದ್ದಿನ್, ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರರು ಡಾ. ವಿದ್ಯಾರಾಣಿ ಪಿ.ಎಸ್ ಸೇರಿ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.