ಜೂನ್ 30 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ: ಜಿಲ್ಲಾಧಿಕಾರಿ ಎನ್ ಶಿವಶಂಕರ 

ವಿಜಯ ದರ್ಪಣ ನ್ಯೂಸ್….

ಜೂನ್ 30 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ: ಜಿಲ್ಲಾಧಿಕಾರಿ ಎನ್ ಶಿವಶಂಕರ 

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 26 :- ಜಿಲ್ಲೆಯಲ್ಲಿ ಜೂನ್ 30 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದ್ದು ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಜಿಲ್ಲಾಡಳಿತದಿಂದ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜಿಲ್ಲಾ ವ್ಯಾಪ್ತಿಯ ದೊಡ್ಡಬಳ್ಳಾಪುರದಲ್ಲಿ 05 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಪರೀಕ್ಷೆಯು 02 ಅವಧಿಗಳಲ್ಲಿ ನಡೆಯಲಿದ್ದು, ಮೊದಲ ಅವಧಿಯಲ್ಲಿ 713 ಅಭ್ಯರ್ಥಿಗಳು ಹಾಗೂ 2ನೇ ಅವಧಿಯಲ್ಲಿ 1052 ಅಭ್ಯರ್ಥಿಗಳು ಸೇರಿ ಒಟ್ಟು-1200 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷೆಯನ್ನು ಸುಗಮವಾಗಿ ಸಮರ್ಪಕವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ಸಲುವಾಗಿ ಒಬ್ಬರು ನೋಡಲ್ ಅಧಿಕಾರಿ, 04 ಜನ ಮಾರ್ಗಾಧಿಕಾರಿಗಳು, 05 ಮುಖ್ಯ ಅಧಿಕ್ಷಕರುಗಳು, 05 ಸ್ಥಾನಿಕ ಜಾಗೃತದಳದ ಅಧಿಕಾರಿಗಳು 05 ಮೋಬೈಲ್ ಸ್ವಾಧೀನಾಧಿಕಾರಿಗಳು ಹಾಗೂ ಪ್ರತಿ ಕೊಠಡಿಗೆ ಒಬ್ಬರಂತೆ ಕೊಠಡಿ ಮೇಲ್ವಿಚಾರಕರನ್ನು ನೇಮಿಸಲಾಗಿದೆ.

ಪರೀಕ್ಷೆಯನ್ನು ನಡೆಸುವ ಸಲುವಾಗಿ ಡಯಟ್ ಪ್ರಾಂಶುಪಾಲರನ್ನು ಪರೀಕ್ಷಾ ಕೇಂದ್ರದ ವೀಕ್ಷಕರಾಗಿ ನೇಮಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಭದ್ರತೆ ವ್ಯವಸ್ಥೆಗಾಗಿ ಇಬ್ಬರು ಪೋಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲು ಪೋಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಗಿದೆ. ಪರೀಕ್ಷಾ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿ ಹಾಗೂ ಸಿಬ್ಬಂದಿಗಳು ಪರೀಕ್ಷಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಮಾರ್ಗಾಧಿಕಾರಿಗಳು ಸಮಯಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸುವುದು ಪ್ರತಿ ಅಧಿವೇಶನಕ್ಕಾಗಿ ಪ್ರತ್ಯೇಕ ವೀಡಿಯೊ ಚಿತ್ರಿಕರಣ ಮಾಡಿಸಬೇಕು. ಪರೀಕ್ಷಾ ಕಾರ್ಯದಲ್ಲಿ ಎಲ್ಲರೂ ಕಾಳಜಿಯಿಂದ ಜವಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು.

ಮೊದಲನೇ ಅವಧಿಯ ಪರೀಕ್ಷೆಯು ಬೆಳಗ್ಗೆ 9.30 ಗಂಟೆಗೆ ಹಾಗೂ 2ನೇ ಅವಧಿಯ ಪರೀಕ್ಷೆಯು ಮಧ್ಯಾಹ್ನ 2.00 ಗಂಟೆಗೆ ಪ್ರಾರಂಭವಾಗಲಿದೆ. ಅಭ್ಯರ್ಥಿಗಳು ಪರೀಕ್ಷೆ ನಡೆಯುವ 01 ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದ ಆವರಣದಲ್ಲಿ ಹಾಜರಾಗಬೇಕು. ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್, ಕೈಗಡಿಯಾರ, ಕ್ಯಾಲ್ಕುಲೇಟರ್ ಸೇರಿದಂತೆ ಇತರೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ನಿಷೇಧಿಸಲಾಗಿದೆ.

ವಿಕಲಚೇತನ ಅಭ್ಯರ್ಥಿಗಳಿಗೆ ಅಂಗವಿಕಲತೆಯ ಪ್ರಮಾಣಪತ್ರವನ್ನು ಆಧರಿಸಿ ಪರೀಕ್ಷೆ ಬರೆಯಲು ಪ್ರತಿ ಗಂಟೆಗೆ 20 ನಿಮಿಷ ಹೆಚ್ಚುವರಿ ಕಾಲಾವಕಾಶ ಕಲ್ಪಿಸಲಾಗಿದೆ. ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆಗಳನ್ನು ಪಡೆಯುವುದು ಮುಖ್ಯ ಅಧೀಕ್ಷಕರ ಜವಾಬ್ದಾರಿಯಾಗಿದೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುತ್ತದೆ. ಈ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚತಕ್ಕದೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.