ಬೃಹತ್ ಉದ್ಯೋಗ ಮೇಳಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ.

ವಿಜಯ ದರ್ಪಣ ನ್ಯೂಸ್ 

ಸೆಪ್ಟೆಂಬರ್ ನಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ

ಬೃಹತ್ ಉದ್ಯೋಗ ಮೇಳಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ.

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 05 (ಕರ್ನಾಟಕ ವಾರ್ತೆ):- ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವು ದೇವನಹಳ್ಳಿ ಟೌನ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಸೆಪ್ಟೆಂಬರ್ ನ ಎರಡನೇ ವಾರದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮಕ್ಕೆ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಸೂಚಿಸಿದರು.


ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮ’ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬೃಹತ್ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಕಂಪನಿಗಳು, ಉದ್ಯೋಗಾಕಾಂಕ್ಷಿ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕ್ರಮ ವಹಿಸಿ ಉದ್ಯೋಗಾಂಕ್ಷಿಗಳ ಆನುಕೂಲವಾಗುವಂತೆ ನೋಂದಣಿಗಾಗಿ ಆನ್ಲೈನ್ ಪೋರ್ಟಲ್ ಸಿದ್ದಪಡಿಸಿ. ಉದ್ಯೋಗಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ವ್ಯಾಪಕ ಪ್ರಚಾರ ಮಾಡಿ, ಉದ್ಯೋಗ ಮೇಳವನ್ನು ಯಶಸ್ವಿಗೊಳಿಸಲು ಪೂರ್ವ ಯೋಜನೆ ಸಿದ್ದಪಡಿಸಿ ಎಂದು ಹೇಳಿದರು.

ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್., ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಟಿ.ಕೆ ರಮೇಶ್, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ನರೇಂದ್ರ ಬಾಬು, ಜಿಲ್ಲಾ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಗನ್ನಾಥ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

XxxxxxxxxxxxxxxxxxxxxxxxxxxxxxX

ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕಾಗಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 05,2024 :- 2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಸಚಿವಾಲಯ ಮತ್ತು ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆಯ ವತಿಯಿಂದ ರಾಷ್ಟ್ರೀಯ ವಿದ್ಯಾರ್ಥಿವೇತನ ಯೋಜನೆಯಡಿ ಆನ್ಲೈನ್ ಮೂಲಕ (ವೆಬ್-ಸೈಟ್ http://scholarships.gov.in/) ಅರ್ಜಿ ಆಹ್ವಾನಿಸಲಾಗಿದ್ದು, ಪ್ರಿಮೆಟ್ರಿಕ್ ವ್ಯಾಸಂಗಕ್ಕೆ ಅರ್ಜಿ ಸಲ್ಲಿಸಲು ಕೊನೆಯ 2024ರ ಆಗಸ್ಟ್ 31 ರವೆರೆಗೆ ಹಾಗೂ ಪೋಸ್ಟ್ ಮೆಟ್ರಿಕ್ ಮತ್ತು ಟಾಪ್ ಕ್ಲಾಸ್ಗಳ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು 2024ರ ಅಕ್ಟೊಬರ್ 31 ರವರೆಗೂ ಕಾಲಾವಕಾಶವಿರುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಶಾಲಾ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ಈ ಒಂದು ಸೌಲಭ್ಯವನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಛೇರಿ. ನಂ.3 ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಹಾಗೂ ವಿಕಲಚೇತನರ ಸಹಾಯವಾಣಿ ಸಂಖ್ಯೆ- 080-29787441 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.