ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರು ಆನ್ಲೈನ್ ನಲ್ಲಿ ನೋಂದಾಯಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್
ವಿಜಯ ದರ್ಪಣ ನ್ಯೂಸ್…
ಸೆಪ್ಟೆಂಬರ್ 13 ರಂದು ಜಿಲ್ಲಾಮಟ್ಟದ ಉದ್ಯೋಗ ಮೇಳ
ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರು ಆನ್ಲೈನ್ ನಲ್ಲಿ ನೋಂದಾಯಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 21 :ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವು ಸೆಪ್ಟೆಂಬರ್ 13ರಂದು ದೇವನಹಳ್ಳಿ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗುತ್ತಿದ್ದು ಆಸಕ್ತ ಉದ್ಯೋಕಾಂಕ್ಷಿಗಳು ಹಾಗೂ ಉದ್ಯೋಗದಾತರು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆನ್ಲೈನ್ ಪೋರ್ಟಲ್ ನಲ್ಲಿ ನೋಂದಾಯಿಸಿಕೊಳ್ಳಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಹೇಳಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರ ಮಹಾತ್ವಾಕಾಂಕ್ಷಿ ಆಶಯದೊಂದಿಗೆ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ. ಜಿಲ್ಲೆಯಲ್ಲಿ ಹೆಚ್ಚಿನ ಕೈಗಾರಿಕಾ ಪ್ರದೇಶವಿದ್ದು ಉದ್ಯೋಗಾವಕಾಶಗಳು ಕೂಡ ಹೆಚ್ಚು ಸೃಷ್ಟಿ ಆಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ. ಉದ್ಯೋಗ ಮೇಳದಲ್ಲಿ 100 ಕ್ಕಿಂತ ಹೆಚ್ಚು ವಿವಿಧ ಕಂಪನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಖಾಸಗಿ ಕಂಪನಿಗಳು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ವಿವಿಧ ಜಿಲ್ಲೆಗಳ ಉದ್ಯೋಗಾಂಕ್ಷಿಗಳು ಕೂಡ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅವಕಾಶವಿದೆ ಎಂದರು.
ಉದ್ಯೋಗಾಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆನ್ಲೈನ್ ಪೋರ್ಟಲ್ https://bangalorerural.nic.in/en/job-fair/ ನಲ್ಲಿ ಸ್ವ-ವಿವರದೊಂದಿಗೆ ನೊಂದಾಯಿಸಬಹುದಾಗಿದೆ.
ಎಸ್.ಎಸ್.ಎಲ್.ಸಿ , ಪಿಯುಸಿ, ಐಟಿಐ, ಡಿಪ್ಲೋಮೋ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಮತ್ತು
ವಿವಿಧ ತರಬೇತಿ ಸಂಸ್ಥೆಗಳಲ್ಲಿ ಕೌಶಲ್ಯ ತರಬೇತಿ ಪಡೆದ ಅಭ್ಯರ್ಥಿಗಳು, ಆಸಕ್ತ ಉದ್ಯೋಕಾಂಕ್ಷಿಗಳು ಸ್ವವಿವರ ವುಳ್ಳ ಬಯೋಡಾಟಾ ದೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಉಚಿತ ಪ್ರವೇಶವಿದ್ದು, ಸಂದರ್ಶನಕ್ಕೆ ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ.
ಉದ್ಯೋಗ ಮೇಳದ ಆಯೋಜನೆಗೆ ಸಂಬಂಧಿಸಿದಂತೆ ವಿವಿಧ ಸಮಿತಿಗಳನ್ನು ರಚಿಸಿ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದ್ದು ಉದ್ಯೋಗ ಮೇಳದ ಯಶಸ್ಸಿಗೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಇದುವರೆಗೆ 523 ಉದ್ಯೋಗಾಂಕ್ಷಿಗಳು ನೋಂದಾಯಿಸಿಕೊಂಡಿದ್ದು, ಉದ್ಯೋಗ ಮೇಳದಲ್ಲಿ 5000 ಕ್ಕೂ ಹೆಚ್ಚು ಉದ್ಯೋಗಾಂಕ್ಷಿಗಳು ಭಾಗವಹಿಸುವ ನಿರೀಕ್ಷೆ ಇದೆ. ಆನ್ಲೈನ್ ನಲ್ಲಿ ನೋಂದಾಯಿಸದ ಅಭ್ಯರ್ಥಿಗಳು ಉದ್ಯೋಗ ಮೇಳದ ದಿನದಂದು, ಸ್ಥಳದಲ್ಲಿ ಸ್ಥಾಪಿಸಲಾಗಿರುವ ನೋಂದಣಿ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಮೇಳದ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳಲಾಗುತ್ತಿದೆ. ಉದ್ಯೋಗಾಂಕ್ಷಿಗಳು ಹತ್ತಿರದ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿಗಳಲ್ಲಿಯೂ ಕೂಡ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉಚಿತವಾಗಿ ನೋಂದಾಯಿಸಿಕೊಳ್ಳಬಹುದಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಎನ್ ಅನುರಾಧ,
ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ನರೇಂದ್ರ ಬಾಬು, ಜಿಲ್ಲಾ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಗನ್ನಾಥ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ವಾರ್ತಾ ಇಲಾಖೆ ಸಹಾಯಕಿ ನಿರ್ದೇಶಕಿ ಹೇಮಾವತಿ ಜೆ ಸೇರಿದಂತೆ ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.