ವಿವಿಧ ಕಡೆ ಅನಿರೀಕ್ಷಿತ ದಾಳಿ: ಮೂವರು ಕಿಶೋರ ಕಾರ್ಮಿಕರ ರಕ್ಷಣೆ

ವಿಜಯ ದರ್ಪಣ ನ್ಯೂಸ್ ….

ವಿವಿಧ ಕಡೆ ಅನಿರೀಕ್ಷಿತ ದಾಳಿ: ಮೂವರು ಕಿಶೋರ ಕಾರ್ಮಿಕರ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 23, 2024 :- ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಪೋಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ-1098 ಹಾಗೂ ಶಿಕ್ಷಣ ಇಲಾಖೆ ಇವರ ಜಂಟಿಯಾಗಿ ದೊಡ್ಡಬಳ್ಳಾಪುರ ಪಟ್ಟಣದ ವಿವಿಧ ಸ್ಥಳಗಳಲ್ಲಿ ಶುಕ್ರವಾರದಂದು ಬಾಲ ಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯನ್ನು ನಡೆಸಿದರು.


ಈ ತಪಾಸಣೆ ವೇಳೆಯಲ್ಲಿ ಮೂವರು ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಬಳಿಕ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಮುಂದಿನ ಕ್ರಮಕ್ಕಾಗಿ ಹಾಜರು ಪಡಿಸಿದರು.

ಅಲ್ಲದೇ ವಿವಿಧ ಸ್ಥಳಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಳ್ಳದಂತೆ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು, ಇಟ್ಟಿಗೆ ಕಾರ್ಖಾನೆ ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ, ಮಾಲೀಕರಿಗೆ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, 14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 06 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ 02 ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ರೂ. 20,000/- ಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ರೂ. 50,000/- ಸಾವಿರದವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಜಾಗೃತಿ ಮೂಡಿಸಿದರು.

ಇದೇ ವೇಳೆ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಕರಪತ್ರವನ್ನು ಮತ್ತು ಭಿತ್ತಿಪತ್ರಗಳನ್ನು ಅಂಗಡಿಗಳ ಮಾಲೀಕರಿಗೆ ವಿತರಿಸುವ ಮೂಲಕ ಇನ್ನು ಮುಂದೆ ತಮ್ಮ ಸುತ್ತಮುತ್ತಲಿನಲ್ಲಿ ಯಾವುದೇ ಮಕ್ಕಳನ್ನು ನೇಮಿಸಿಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೋಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕರೆ ಮಾಡುವುದರ ಮೂಲಕ ಮಕ್ಕಳನ್ನು ರಕ್ಷಣೆ ಮಾಡಲು ಸಾರ್ವಜನಿಕರು ಹಾಗೂ ಅಂಗಡಿಗಳ ಮಾಲೀಕರು ಸಹಕಾರ ನೀಡುವಂತೆ ಅಧಿಕಾರಿಗಳು ಸೂಚಿಸಿದರು.

ಅಲ್ಲದೇ ದೊಡ್ಡಬಳ್ಳಾಪುರ ಪಟ್ಟಣದ ವಿವಿಧ ಸ್ಥಳಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಂಳ್ಳದಂತೆ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಮಾಲೀಕರಿಗೆ ಕರಪತ್ರಗಳನ್ನು ಹಂಚಿ ಮಾಲೀಕರಿಗೆ ಹಾಗೂ ಸ್ಥಳಗಳಲ್ಲಿ ಇದ್ದ ಸಾರ್ವಜನಿಕರಿಗೆ ಜಾಗೃತಿಯನ್ನು ಮೂಡಿಸಲಾಯಿತು.
ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯಲ್ಲಿ ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಸುಬ್ಬಾರಾವ್. ಎಸ್, ಕಾರ್ಮಿಕ ನಿರೀಕ್ಷಕ ದಯಾನಂದ ಸಾಗರ್, ಶಿಕ್ಷಣ ಇಲಾಖೆಯ ಇಸಿಒ ಭೀಮರಾಜು ಪೋಲಿಸ್ ಸಿಬ್ಬಂದಿ ಚಿತ್ರಲಿಂಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಪದ್ಮಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ನರಸಿಂಹ ರಾಜು, ಮಕ್ಕಳ ಸಹಾಯವಾಣಿಯ ಸಿಬ್ಬಂದಿ ಶ್ರೀನಿವಾಸ ಮತ್ತು ಸೌಮ್ಯ ಹಾಜರಿದ್ದರು.

ಮೊಬೈಲ್ ರಿಪೇರಿ & ಸೇವೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 22,2024 :-ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಸೆಪ್ಟೆಂಬರ್ 11 ರಿಂದ ಪ್ರಾರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9380162042 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.