ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ಜಿ.ಪಂ ಸಿಇಒ ಡಾ. ಕೆ.ಎನ್ ಅನುರಾಧ

ವಿಜಯ ದರ್ಪಣ ನ್ಯೂಸ್ …..

ವಿಶ್ವ ಪ್ರವಾಸೋದ್ಯಮ ದಿನಾಚರಣೆ

ಬೆಟ್ಟದ ಟ್ರಕ್ಕಿಂಗ್, ಸಸಿ ನೆಡುವ ಹಾಗೂ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ

ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ಜಿ.ಪಂ ಸಿಇಒ ಡಾ. ಕೆ.ಎನ್ ಅನುರಾಧ

ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 27, 2024 :- ಜಿಲ್ಲೆಯಲ್ಲಿ ಕುಂದಾಣ ಬೆಟ್ಟ, ಮಾಕಳಿಬೆಟ್ಟ, ಶಿವಗಂಗೆ ಬೆಟ್ಟ, ಸಿದ್ಧರ ಬೆಟ್ಟ, ಆವತಿ ಬೆಟ್ಟದಂತ ಪ್ರವಾಸಿ ತಾಣಗಳು ಹಾಗೂ ಪಾರಂಪರಿಕ ಕಟ್ಟಡಗಳಿರುವುದು ನಮ್ಮೆಲ್ಲರ ಹೆಮ್ಮೆ. ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಚಾರಣಕ್ಕೆ ಅನುಕೂಲಕರ ವಾತಾವರಣವನ್ನು ಜಿಲ್ಲಾಡಳಿತ ಕಲ್ಪಿಸುತ್ತಿದ್ದು, ಸಾರ್ವಜನಿಕರು ಪ್ರವಾಸಿ ತಾಣಗಳಿಗೆ ಭೇಟಿ ನೀಡಿದಾಗ ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡದೆ ಸ್ವಚ್ಛತೆ ಕಾಪಾಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಆವತಿ ಬೆಟ್ಟದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಪ್ರವಾಸೋದ್ಯಮ ಮತ್ತು ಶಾಂತಿ ದ್ಯೇಯ ವಾಕ್ಯದೊಂದಿಗೆ ‘ಟ್ರಕ್ಕಿಂಗ್, ಸಸಿ ನೆಡುವ ಹಾಗೂ ಸ್ವಚ್ಛತಾ ಹೀ ಸೇವಾ ಆಂದೋಲನ’ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್-ಕಸ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಸ್ವಚ್ಛತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಜತೆಗೆ ಪರಿಸರ ಸಂರಕ್ಷಣೆಗಾಗಿ ಗಿಡ-ಮರ ಹೆಚ್ಚಾಗಿ ನೆಟ್ಟು, ಬೆಳೆಸುವ ಮೂಲಕ ಆರೋಗ್ಯಕರ ಪ್ರಕೃತಿ ನಿರ್ಮಿಸಿ ಪರಿಸರ ಸಮತೋಲನ ಕಾಪಾಡಬೇಕು ಎಂದರು.

ಸ್ವಚ್ಛತಾ ಹೀ ಸೇವಾ ಆಂದೋಲನ

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಪ್ರತಿ ವರ್ಷವು ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ’ವನ್ನು ಆಯೋಜಿಸಲಾಗುತ್ತಿದ್ದು ಜಿಲ್ಲೆಯಾದ್ಯಂತ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರ ವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2024 ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಸಿ.ಇ.ಒ ಡಾ.ಕೆ.ಎನ್ ಅನುರಾಧ ಅವರು ಹೇಳಿದರು.

ಸ್ವಚ್ಛತಾ ಹೀ ಸೇವಾ ಆಂದೋಲನದ ಭಾಗವಾಗಿ ಎಲ್ಲಾ ಅಧಿಕಾರಿಗಳು, ಸಂಘಸಂಸ್ಥೆಗಳು, ಸಾರ್ವಜನಿಕರು ದೇವನಹಳ್ಳಿ ತಾಲ್ಲೂಕಿನ ಆವತಿ ಬೆಟ್ಟದಲ್ಲಿ ಪ್ಲಾಸ್ಟಿಕ್ ವಸ್ತುಗಳು, ಕಸ-ತ್ಯಾಜ್ಯವನ್ನು ಸಂಗ್ರಹಿಸಿ ಸ್ವಚ್ಚತೆ ಮಾಡಿದರು. ಈ ಸಂದರ್ಭದಲ್ಲಿ ಸ್ವಚ್ಛತೆ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು. ಬಳಿಕ ಬೆಟ್ಟದ ಸುತ್ತಮುತ್ತಲಿನ ಪ್ರದೇಶದಲ್ಲಿ 100 ಕ್ಕೂ ಅಧಿಕ ಸಸಿಗಳನ್ನು ನೆಡಲಾಯಿತು.
ಈ ದಿನದಂದು ನಾವೆಲ್ಲರೂ ಪರಿಸರ ಸಂರಕ್ಷಣೆಗಾಗಿ ಸಮಾಜದಲ್ಲಿ ಗಿಡ-ಮರ ನೆಟ್ಟು ಹಸಿರು ವಾತವರಣ ನಿರ್ಮಿಸುವದಾಗಿ ಪ್ರತಿಜ್ಞೆಯನ್ನು ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ಅರಣ್ಯ ಬೆಳೆಸಿ ಪೋಷಿಸಿದ ಅಧಿಕಾರಿಗಳು, ಸಿಬ್ಬಂದಿ, ಪರಿಸರ ಸಂಸ್ಥೆಗಳು ಹಾಗೂ ಪ್ರವಾಸೋದ್ಯಮ ಮಿತ್ರರ ಕಾರ್ಯಕ್ಕೆ ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಆರ್. ಸುಮಾ, ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರೀನಾ ಸಿಕ್ಕಲಿಗಾರ, ಜಿ.ಪಂ ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಪ್ರೀತಿ, ದೇವನಹಳ್ಳಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರಗೌಡ, ದೊಡ್ಡಬಳ್ಳಾಪುರ ವಿಭಾಗದ ಡಿವೈಎಸ್ಪಿ ರವಿ, ಆವತಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಸೇರಿದಂತೆ ಸಾರ್ವಜನಿಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.