ಸಮಾಜ ಏಕತೆಯಿಂದ ಸಾಗಲು ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಕಾರ್ಯಕ್ರಮಗಳು ದಾರಿದೀಪ: ಸಚಿವ ಕೆ.ಹೆಚ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್….
ಜಿಲ್ಲಾಡಳಿತ ಭವನದಲ್ಲಿ ಗಾಂಧೀಜಿ, ಶಾಸ್ತ್ರೀಜಿ ಜಯಂತಿ ಆಚರಣೆ
ಸಮಾಜ ಏಕತೆಯಿಂದ ಸಾಗಲು ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಕಾರ್ಯಕ್ರಮಗಳು ದಾರಿದೀಪ: ಸಚಿವ ಕೆ.ಹೆಚ್ ಮುನಿಯಪ್ಪ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 02 :- ಸಮಾಜವನ್ನು ಸಮಾನತೆ, ಏಕತೆಯಿಂದ ಇಡಲು ಪ್ರತಿಯೊಬ್ಬರು ಗಾಂಧೀಜಿ ಹಾಗೂ ಶಾಸ್ತ್ರೀಜಿ ರವರ ಸ್ವಚ್ಛ ಭಾರತ, ಸತ್ಯ, ಅಹಿಂಸೆ ಮುಂತಾದ ಆದರ್ಶಮಯ ಕಾರ್ಯಕ್ರಮಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ನಡೆಯಬೇಕಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 155ನೇ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ರವರ 120 ನೇ ಜಯಂತಿ ಅಂಗವಾಗಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟಿದ್ದರು, ಅಹಿಂಸೆ , ಅಸಹಕಾರ ಚಳವಳಿಯಿಂದಲೇ ಸ್ವಾತಂತ್ರ್ಯ ದೊರಕಿಸಿಕೊಟ್ಟರು. ಮಹಾತ್ಮಾ ಗಾಂಧೀಜಿಯವರ ಚಿಂತನೆ, ತತ್ವಾದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಚಿವರು ಹೇಳಿದರು.
ಪ್ರತಿವರ್ಷ ಅಕ್ಟೋಬರ್ 2 ರಂದು ದೇಶದ ಜನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಗುಣಗಾನ ಮಾಡುತ್ತಾರೆ. ಹಾಗೇ ಮತ್ತೊಬ್ಬ ಶ್ರೇಷ್ಠ ಮುತ್ಸದ್ಧಿ, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರನ್ನೂ ನೆನೆಯುತ್ತಾರೆ. ಶಾಸ್ತ್ರೀಜಿ ಭಾರತ ದೇಶ ಕಂಡ ಅಪ್ರತಿಮ ನಾಯಕ. ಸರಳ ವ್ಯಕ್ತಿತ್ವ ಹೊಂದಿದ್ದ ಮಹಾನ್ ವ್ಯಕ್ತಿಯಾಗಿದ್ದರು. ‘ಜೈ ಜವಾನ್ ಜೈ ಕಿಸಾನ್’ ಎನ್ನುವ ಮಹೋನ್ನತ ಮಂತ್ರ ಘೋಷಿಸಿದವರು. ಸಜ್ಜನ ನೇತಾರ ಎಂದು ಸ್ಮರಿಸಿದರು.
ಅಪರ ಜಿಲ್ಲಾಧಿಕಾರಿ ಆರ್. ಸುಮಾ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಟಿ.ಕೆ ರಮೇಶ್, ನಗರಾಭಿವೃದ್ಧಿ ಯೋಜನ ನಿರ್ದೇಶಕ ರಮೇಶ್, ದೇವನಹಳ್ಳಿ ತಾಲ್ಲೂಕು ತಹಸೀಲ್ದಾರ್ ಬಾಲಕೃಷ್ಣ, ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಜಿಲ್ಲಾಡಳಿತ ಸಿಬ್ಬಂದಿ ಉಪಸ್ಥಿತರಿದ್ದರು.