ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ : ಜಿಲ್ಲಾಧಿಕಾರಿ ಡಾ.ಶಿವಶಂಕರ
ವಿಜಯ ದರ್ಪಣ ನ್ಯೂಸ್….
ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ: ಜಿಲ್ಲಾಧಿಕಾರಿ ಡಾ.ಶಿವಶಂಕರ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವ್ಹೆಂಬರ್ 07, 2024 :-ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಮಾರುವ ಹಾಗೂ ಕೊಳ್ಳುವವರಿಗೆ ಬಾಲನ್ಯಾಯ ಕಾಯ್ದೆ-2015 ರ ಸೆಕ್ಷನ್ 80 ಮತ್ತು 81 ರನ್ವಯ 05 ವರ್ಷಗಳವರೆಗೂ ಸೆರೆಮನೆ ವಾಸದೊಂದಿಗೆ 01 ಲಕ್ಷ ರೂಗಳ ದಂಡ ವಿಧಿಸಲಾಗುವುದು.
ಇಂತಹ ಅಪರಾಧಗಳಲ್ಲಿ ಆಸ್ಪತ್ರೆಯವರು ಶಾಮೀಲಾದರೆ ಶಿಕ್ಷೆಯ ಅವಧಿ 03 ವರ್ಷಗಳಿಗೆ ಕಡಿಮೆ ಇಲ್ಲದಂತೆ 07 ವರ್ಷಗಳವರೆಗೆ ವಿಸ್ತರಣೆ’ ಮಾಡಬಹುದಾಗಿದೆ.
ಈ ಸಂಬಂಧ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಮಕ್ಕಳ ಮಾರಾಟ ಅಪರಾಧದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಅನಾಥ ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿಯು ಕಂಡುಬಂದಲ್ಲಿ ಸಾರ್ವಜನಿಕರು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂ.ಸಂಖ್ಯೆ:080-29560034 ನ್ನು ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶೈಕ್ಷಣಿಕ ಸಾಲಕ್ಕಾಗಿ ಅರ್ಜಿ ಆಹ್ವಾನ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವ್ಹೆಂಬರ್. 07 :-ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯವನ್ನು ಪಡೆಯಲು ಆರ್ಯ ವೈಶ್ಯ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರಿವು ಯೊಜನೆಯಡಿ ಶೈಕ್ಷಣಿಕ ಸಾಲ ಪಡೆಯಲು ಸಿ.ಇ.ಟಿ./ ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ 1,00,000 ರೂ.ಗಳ ಸಾಲವನ್ನು ಶೇ.02 ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು.
ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.
ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ 6,00,000 ರೂ.ಗಳ ಮಿತಿಯೊಳಗಿರಬೇಕು.
ಅರ್ಜಿಗಳನ್ನು ಆನ್ಲೈನ್ kacdc.karnataka.gov.in ಮೂಲಕ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ. 9448451111 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.