ಗೌರವಧನ ಹೆಚ್ಚಳಕ್ಕೆ ಮಹಾ ಒಕ್ಕೂಟದ ಅಧ್ಯಕ್ಷೆ ರುದ್ರಮ್ಮ  ಅಗ್ರಹ

ವಿಜಯ ದರ್ಪಣ ನ್ಯೂಸ್….

ಗೌರವಧನ ಹೆಚ್ಚಳಕ್ಕೆ  ಮಹಾ ಒಕ್ಕೂಟದ ಅಧ್ಯಕ್ಷೆ ರುದ್ರಮ್ಮ  ಅಗ್ರಹ

ಬೆಂಗಳೂರು: ಸಂಘಗಳ ಆಧಾರದ ಮೇಲೆ ಮೌಲ್ಯಮಾಪನ ಮಾಡಿ ಗೌರವಧನ ನೀಡುವ ಆದೇಶ ವಾಪಸ್ ಪಡೆದು ಎಲ್ಲರಿಗೂ ಸಮಾನ ಗೌರವ ಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಗ್ರಾಮ ಪಂಚಾಯಿತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರ (ಎಂಬಿಕೆ) ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ (ಎಲ್‌ಸಿಆರ್‌ಪಿ), ಸಖಿಯರ ಮಹಾ ಒಕ್ಕೂಟ ಆಗ್ರಹಿಸಿದೆ.

ಸೋಮವಾರ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷೆ ರುದ್ರಮ್ಮ, ‘ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿದೆ. ಆದರೆ ಗ್ರಾಮೀಣ ಮಹಿಳೆಯರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗೆ ಹಗಲು, ರಾತ್ರಿ ಶ್ರಮಿಸಿ ದುಡಿಯುತ್ತಿರುವ ಮುಖ್ಯ ಪುಸ್ತಕ ಬರಹಗಾರರು, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು ಮತ್ತು ಸಖಿಯರಿಗೆ ಕಡಿಮೆ ವೇತನ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಸಮಾನ ವೇತನ ನೀಡಿ, ನಂತರ ಮೌಲ್ಯಮಾಪನದ ಮೂಲಕ ಹೆಚ್ಚು ವ್ಯವಹರಿಸುವವರಿಗೆ ಪ್ರೋತ್ಸಾಹ ಧನ ಉತ್ತೇಜಿಸಬೇಕು’
ಎಂದು ಹೇಳಿದರು.

ಮಹಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕುಸಮಾ ಮಾತನಾಡಿ, ‘ಮುಖ್ಯ ಪುಸ್ತಕ ಬರಹಗಾರರಿಗೆ ತಿಂಗಳಿಗೆ ಗೌರವಧನ ₹20 ಸಾವಿರ ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಿಗೆ ₹15 ಸಾವಿರ ನಿಗದಿಪ ಡಿಸಬೇಕು. ವಾರ್ಷಿಕವಾಗಿ ಸೇವಾ ಹಿರಿತನದ ಆಧಾರದಲ್ಲಿ ಶೇಕಡ 10ರಷ್ಟು ವೇತನ ಹೆಚ್ಚಳ ಮಾಡಬೇಕು’ ಎಂದು ಆಗ್ರಹಿಸಿದರು.

ಸರ್ಕಾರ ನೀಡುತ್ತಿರುವ ಗೌರವಧನದಿಂದ ಜೀವನ ನಡೆಸುವುದು ಕಷ್ಟವಾಗಿದೆ. ಕೂಡಲೇ ವೇತನ ಹೆಚ್ಚಳ ಮಾಡಬೇಕು. ಇಲ್ಲವಾದರೆ ಬೆಳಗಾವಿಯಲ್ಲಿ ವಿಧಾನಮಂಡಲದ ನಡೆಯುವ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಹೋರಾಟ ಮಾಡುತ್ತಾರೆ ಎಂದು ಎಚ್ಚರಿಸಿದರು.

ಮಹಾ ಒಕ್ಕೂಟದ ಉಪಾಧ್ಯಕ್ಷೆ ಉಮಾ, ರಾಜ್ಯದ 30 ಜಿಲ್ಲೆಗಳಲ್ಲಿ ಗ್ರಾಮೀಣ ಪ್ರದೇಶಗಳ ವಿಲೇವಾರಿಯನ್ನು ಗ್ರಾಮ ಪಂಚಾಯತಿಗೆ ನೀಡಬೇಕು. ಮೃತಪಟ್ಟ ಸಂಘದ ಸದಸ್ಯರಿಗೆ ₹6 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.