ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ತ್ವರಿತ ವಿಲೇವಾರಿಗೆ ಕ್ರಮ: ಅಪರ ಜಿಲ್ಲಾಧಿಕಾರಿ ಅಮರೇಶ್. ಹೆಚ್

ವಿಜಯ ದರ್ಪಣ ನ್ಯೂಸ್…

ಜನವರಿ ಮಾಹೆಯಿಂದ ಇದುವರೆಗೂ 48 ದೌರ್ಜನ್ಯ ಪ್ರಕರಣಗಳು ದಾಖಲು

ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ತ್ವರಿತ ವಿಲೇವಾರಿಗೆ ಕ್ರಮ: ಅಪರ ಜಿಲ್ಲಾಧಿಕಾರಿ ಅಮರೇಶ್. ಹೆಚ್

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಡಿ. 26 :- ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ತೋರದೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2024ನೇ ಕ್ಯಾಲೆಂಡರ್ ವರ್ಷದ 4ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಕಾಯ್ದೆಯಲ್ಲಿ ಪ್ರಕರಣಗಳು ದಾಖಲಾದ ಕೂಡಲೇ ಪ್ರಥಮ ವರ್ತಮಾನ ವರದಿ ಆಧಾರದ ಮೇಲೆ ಪರಿಹಾರ ಧರವನ್ನು ಮಂಜೂರು ಮಾಡಬೇಕಾಗಿರುವುದರಿಂದ ಪ್ರಥಮ ವರ್ತಮಾನ ವರದಿ ಹಾಗೂ ಇತರ ದಾಖಲಾತಿಗಳನ್ನು ಜಿಲ್ಲಾ ಹಾಗೂ ತಾಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಕಳುಹಿಸಲು ತಿಳಿಸಿದರು

ದೌರ್ಜನ್ಯ ಪ್ರಕರಣಗಳ ದಾಖಲು, ಪರಿಹಾರ ಧನದ ಮಂಜೂರಾತಿ ವಿವರಗಳ ಪರಿಶೀಲನೆ ನಡೆಸಿದ ಅವರು 2024ರ ಅಕ್ಟೋಬರ್. 1 ರಿಂದ 2024ರ ಡಿಸೆಂಬರ್. 18 ವರೆಗೆ ಒಟ್ಟು 28 ಜನ ಸಂತ್ರಸ್ತರಿಗೆ ಒಟ್ಟು 8,75,000 ರೂ ಗಳ ಪರಿಹಾರ ಧನವನ್ನು ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಜನವರಿ ಮಾಹೆಯಿಂದ ಇಲ್ಲಿಯವರೆಗೆ 48 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ, ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ದಾಖಲಾದ ಪ್ರಕರಣಗಳಲ್ಲಿ ತನಿಖೆಯನ್ನು ಪೂರ್ಣಗೊಳಿಸುವ ಚಾರ್ಜ್ ಶೀಟ್ ಅನ್ನು ಕಾಲಾವಧಿಯಲ್ಲೇ ಸಲ್ಲಿಸುವ ಜತೆಗೆ ಯಾವುದೇ ಚಾರ್ಜ್ ಶೀಟ್ ಬಾಕಿ ಉಳಿಸಿಕೊಳ್ಳದಂತೆ ಪೋಲಿಸ್ ಅಧಿಕಾರಿಗಳು ಕ್ರಮ ವಹಿಸಿ ಎಂದು ಹೇಳಿದರು.

ದೌರ್ಜನ್ಯ ಪ್ರಕರಣಗಳು ಹಾಗೂ ಗಲಭೆ/ಗುಂಪು ಗಲಭೆಗಳು ಹೆಚ್ಚಾಗಿ ಕಂಡುಬಂದ ಗ್ರಾಮ/ ಹಳ್ಳಿಗಳನ್ನು ಗುರುತಿಸಿ ಸಂಬಂಧಪಟ್ಟ ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಶಾಂತಿಸಭೆ ನಡೆಸಲು ನಿರ್ದೇಶನ ನೀಡಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಪ್ರೇಮಾ ಟಿ.ಎಲ್.ಎಸ್, ಡಿವೈಎಸ್ಪಿ ರವಿ, ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಬಾಲಕೃಷ್ಣ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಮೊಬೈಲ್ ರಿಪೇರಿ & ಸೇವೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಜನವರಿ 03 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.