ದೇವನಹಳ್ಳಿ ತಾಲ್ಲೂಕಿನ 33 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶೀಘ್ರ ಚಾಲನೆ:ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್….

ಸಿ.ಎಸ್.ಆರ್ ಅನುದಾನದಡಿ ಜಿಲ್ಲೆಯ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಇನ್ಫೋಸಿಸ್ ಸಂಸ್ಥೆ ನೀಲನಕ್ಷೆ

ದೇವನಹಳ್ಳಿ ತಾಲ್ಲೂಕಿನ 33 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶೀಘ್ರ ಚಾಲನೆ

ಇನ್ಫೋಸಿಸ್ ಸಂಸ್ಥೆಯ ಸಾಮಾಜಿಕ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವ ಕೆ.ಹೆಚ್ ಮುನಿಯಪ್ಪ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಜನವರಿ.01:-

ಇನ್ಫೋಸಿಸ್ ಸಂಸ್ಥೆಯು ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿ.ಎಸ್.ಆರ್)ಯಡಿ ಜಿಲ್ಲೆಯ ಸರ್ಕಾರಿ ಶಾಲಾ ಕಟ್ಟಡಗಳನ್ನು ನವೀಕರಣ ಮತ್ತು ಅಭಿವೃದ್ಧಿ ಪಡಿಸಲು ಮುಂದೆ ಬಂದಿರುವುದು ಜಿಲ್ಲೆಯ ಜನತೆಗೆ ಹೆಮ್ಮೆಯ ವಿಷಯ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಿಎಸ್ಆರ್ ಅನುದಾನದಡಿ ಸರ್ಕಾರಿ ಶಾಲಾ ಕಟ್ಟಡಗಳ ಅಭಿವೃದ್ಧಿ ಪಡಿಸುವ ಸಲುವಾಗಿ ಚರ್ಚಿಸಲು ನಡೆದ ಸಭೆಯಲ್ಲಿ ಅವರು ಮಾತನಾಡಿ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ರೂಂ ಗಳು, ಮೂಲಭೂತ ಸೌಕರ್ಯ, ಲ್ಯಾಬ್ ವ್ಯವಸ್ಥೆ, ಗ್ರಂಥಾಲಯ, ಆಟದ ಮೈದಾನ ಮತ್ತು ಶಿಕ್ಷಕರನ್ನು ಒದಗಿಸುವುದಾಗಿ ಸಂಸ್ಥೆ ಹೇಳಿದೆ. ಮೊದಲ ಹಂತದಲ್ಲಿ ದೇವನಹಳ್ಳಿ ತಾಲೂಕಿನ 33 ಶಾಲೆಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಹಂತ ಹಂತವಾಗಿ ಇನ್ನುಳಿದ ಮೂರು ತಾಲ್ಲೂಕುಗಳ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಸಂಸ್ಥೆ ರೂಪುರೇಷೆ ಸಿದ್ದಪಡಿಸಿದೆ ಎಂದರು.

ಸಿಎಸ್ಆರ್ ಅನುದಾನ ದಡಿ ನಿರ್ಮಾಣಗೊಳ್ಳಲಿರುವ ಶಾಲಾ ಕಟ್ಟಡಗಳು ಗುಣಮಟ್ಟದಿಂದ ಕೂಡಿರಬೇಕು ಹಾಗೂ ಸಾಕಷ್ಟು ವರ್ಷ ಕಟ್ಟಡ ಬಾಳಿಕೆ ಬರಬೇಕು. ಆ ರೀತಿಯಲ್ಲಿ ಯೋಜನೆ ರೂಪಿಸಿ ಶಾಲಾ ಕಟ್ಟಡ ನಿರ್ಮಾಣ ಮಾಡಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಸಾಕಷ್ಟು ರೈತರು ಕೈಗಾರಿಕಾ ಪ್ರದೇಶದಿಂದ ಕೃಷಿ ಭೂಮಿ ಕಳೆದುಕೊಂಡಿದ್ದಾರೆ, ಆ ರೈತರ ಕುಟುಂಬದವರು ಈಗ ಕೈಗಾರಿಕೆಗಳಲ್ಲಿ ಕಡಿಮೆ ಸಂಬಳಕ್ಕೆ ದುಡಿಯುತ್ತಿರುವುದು ವಾಸ್ತವ. ಅಂತಹ ಪರಿಸ್ಥಿತಿ ಮುಂದಿನ ಪೀಳಿಗೆಯ ಮಕ್ಕಳಿಗೆ ಬರಬಾರದು ಹಾಗಾಗಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು, ಬಡತನದಿಂದ ಬೆಳೆದ ಮಕ್ಕಳು ಒಳ್ಳೆಯ ವಿದ್ಯಾಭ್ಯಾಸ ಪಡೆಯಲು ಸಹಕಾರಿ ಆಗಬೇಕು. ಖಾಸಗಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ಮರಳಿ ಸರ್ಕಾರಿ ಶಾಲೆಗಳತ್ತ ಬರಬೇಕು ಎಂಬುದು ನನ್ನ ಆಶಯ. ಕೆ.ಪಿ.ಎಸ್ ಶಾಲೆಗಳನ್ನು ಸಹ ಉನ್ನತ ಶ್ರೇಣಿಯಲ್ಲಿ ನವೀಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಮಾತನಾಡಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಜೊತೆಗೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅಷ್ಟೇ ಮುಖ್ಯ. ಶಾಲೆಗಳಿಗೆ ಕೌಶಲ್ಯಾಧಾರಿತ ಶಿಕ್ಷಕರನ್ನು ನೇಮಿಸುವುದರೊಂದಿಗೆ ಶಿಕ್ಷಕರ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಉಪವಿಭಾಗಾಧಿಕಾರಿ ದುರ್ಗಶ್ರೀ , ಇನ್ಫೋಸಿಸ್ ಸಂಸ್ಥೆ ಅಧಿಕಾರಿ ಗಗನ್ ಮಟ್ಟಿ ಹಾಗೂ ತಂಡ, ಜಿಲ್ಲಾ ಮಟ್ಟದ ಅಧಿಕಾರಿಗಳು, ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.