ಭಾಗಮಂಡಲ ತಲಕಾವೇರಿಯಲ್ಲಿ ಡಿಸಿಎಂ ಶಿವಕುಮಾರ್ ವಿಶೇಷ ಪೂಜೆ
ವಿಜಯ ದರ್ಪಣ ನ್ಯೂಸ್…
ಭಾಗಮಂಡಲ ತಲಕಾವೇರಿಯಲ್ಲಿ ಡಿಸಿಎಂ ಶಿವಕುಮಾರ್ ವಿಶೇಷ ಪೂಜೆ
ಮಡಿಕೇರಿ ಮಾ.21:- ಕಾವೇರಿ ಆರತಿ ಕಾರ್ಯಕ್ರಮದ ಪ್ರಯುಕ್ತ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಡಿನ ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ಹಾಗೂ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಗೆ ಶುಕ್ರವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ದೇವಾಲಯದ ತ್ರೀವೇಣಿ ಸಂಗಮಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅವರು ತ್ರಿವೇಣಿ ಸಂಗಮದಲ್ಲಿ ತೀರ್ಥ ಪ್ರಸಾದ ಪಡೆದರು. ಬಳಿಕ ಮಹಾಗಣಪತಿ, ಭಗಂಡೇಶ್ವರ, ಮಹಾವಿಷ್ಣು, ಸುಬ್ರಮಣ್ಯ ದೇವರಿಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿ ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಿ ನಾಡಿಗೆ ಸಮೃದ್ಧಿ ತರುವಂತಾಗಲಿ ಎಂದು ಪ್ರಾರ್ಥಿಸಿದರು.
ನಂತರ ತಲಕಾವೇರಿಗೆ ಭೇಟಿ ನೀಡಿ ತಲಕಾವೇರಿಯ ಬ್ರಹ್ಮಕುಂಡಿಕೆ ಬಳಿಯ ಕೊಳದಲ್ಲಿ ಪುಣ್ಯಸ್ನಾನ ಮಾಡಿದರು. ಉಪ ಮುಖ್ಯಮಂತ್ರಿ ಅವರ ಜತೆ ಶಾಸಕ ಡಾ. ಮಂತರ್ ಗೌಡ ಅವರು ಪುಣ್ಯಸ್ನಾನ ಮಾಡಿದರು.
ಬಳಿಕ ಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ, ಬ್ರಹ್ಮಕುಂಡಿಕೆಯಲ್ಲಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿ, ಕುಂಕುಮಾರ್ಚನೆ ನೆರವೇರಿಸಿದರು. ಇಡೀ ನಾಡಿಗೆ ತಾಯಿ ಕಾವೇರಿ ಮಾತೆ ಕುಡಿಯುವ ನೀರು ಕಲ್ಪಿಸುತ್ತಿದ್ದು, ಕುಡಿಯುವ ನೀರಿನ ಮಹತ್ವ ಬಗ್ಗೆ ಸಂದೇಶ ಸಾರುವ ನಿಟ್ಟಿನಲ್ಲಿ ‘ಕಾವೇರಿ ಆರತಿ’ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕಾವೇರಿ ತೀರ್ಥ ಪ್ರಸಾದವನ್ನು ಇದೇ ಸಂದರ್ಭದಲ್ಲಿ ಸ್ವೀಕರಿಸಿ, ಬೆಂಗಳೂರು ಜಲ ಮಂಡಲಿ ಅಧ್ಯಕ್ಷ ರಾಮ್ ಪ್ರಸಾದ್ ಅವರಿಗೆ ಹಸ್ತಾಂತರಿಸಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ. ಸಿಇಒ ಆನಂದ್ ಪ್ರಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಗ್ಯಾರಂಟಿ ಯೋಜನೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ಉಪ ಮುಖ್ಯಮಂತ್ರಿ ಅವರ ತಾಂತ್ರಿಕ ಸಲಹೆಗಾರರಾದ ಜಯಪ್ರಕಾಶ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ಬೃಹತ್ ನೀರಾವರಿ ಇಲಾಖೆಯ ಮುಖ್ಯ ಎಂಜಿನಿಯರ್ ಆರ್.ಎಲ್.ವೆಂಕಟೇಶ್, ಅಧೀಕ್ಷಕ ಎಂಜಿನಿಯರ್ ರಘುಪತಿ, ಹಾರಂಗಿ ಜಲಾಶಯ ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಹಾಗೂ ಇತರರು ಇದ್ದರು.
ಭಾಗಮಂಡಲದ ಹೆಲಿಪ್ಯಾಡ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ‘ನಮ್ಮ ನೀರು, ನಮ್ಮ ಹಕ್ಕು’ ಹೆಸರಿನಲ್ಲಿ ಮೇಕೆದಾಟುವಿನಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ನಮ್ಮ ಜಲ, ನೆಲ ಉಳಿಸುವುದು ಆದ್ಯ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ‘ವಿಶ್ವ ಜಲದಿನ’ದ ಪ್ರಯುಕ್ತ ನೀರಿನ ಮಹತ್ವ ಕುರಿತು ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ತಾಯಿ ಕಾವೇರಿ ಮಾತೆಗೆ ವಿಶೇಷ ಪೂಜೆ ಹಾಗೂ ನಮನ ಸಲ್ಲಿಸಿ, ಕಾವೇರಿ ಆರತಿ ಕಾರ್ಯಕ್ರಮವನ್ನು ಬೆಂಗಳೂರು ಸ್ಯಾಂಕಿ ಕೆರೆ ಆವರಣದಲ್ಲಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ನಮ್ಮ ನಾಡಿನ ಜಲ, ನೆಲ ಉಳಿಸುವ ನಿಟ್ಟಿನಲ್ಲಿ ಕ್ರಮವಹಿಸುವುದು, ಇಡೀ ದಕ್ಷಿಣ ರಾಜ್ಯಕ್ಕೆ ಅನ್ಯಾಯ ಆಗುವುದನ್ನು ತಡೆಯಲು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ಸಭೆ ಕರೆದಿದ್ದು, ಆ ಸಭೆಗೆ ತೆರಳುತ್ತಿದ್ದೇನೆ ಎಂದು ಹೇಳಿದರು.
ವಿಶ್ವ ಜಲದಿನ ಪ್ರಯುಕ್ತ ಬೃಹತ್ ಪ್ರತಿಜ್ಞಾ ವಿಧಿ ಸ್ವೀಕಾರ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಕುಡಿಯುವ ನೀರಿನ ಮಹತ್ವ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಬಹುದಾಗಿದೆ ಎಂದರು.
ನೀರಿನ ಮಹತ್ವ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವಿರಬೇಕು. ಆ ನಿಟ್ಟಿನಲ್ಲಿ ಕೃಷ್ಣರಾಜ ಸಾಗರದಲ್ಲಿಯೂ ಸಹ ಪವಿತ್ರ ಕಾವೇರಿ ಆರತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಿ ನಾಡಿಗೆ ಸಮೃದ್ಧಿ ತರಲು ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ ಎಂದು ಹೇಳಿದರು.
ಕಾವೇರಿ ನದಿಗೆ ಕಲುಷಿತ ನೀರು ಸೇರದಂತೆ ಅಗತ್ಯ ಕಾರ್ಯಕ್ರಮ ರೂಪಿಸುವ ಸಂಬಂಧ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಅವರು ‘ತಂಡ ರಚಿಸಿ ವರದಿ’ ಪಡೆಯಲಾಗುವುದು ಎಂದರು.
ಜಲ, ನೆಲ, ಇತಿಹಾಸ ಪರಂಪರೆ ರಾಜ್ಯದ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ. ಆ ನಿಟ್ಟಿನಲ್ಲಿ ಯಾರೂ ಸಹ ಬಂದ್‍ಗೆ ಮುಂದಾಗಬಾರದು ಎಂದು ಕೋರಿದರು.
ಕೊಡಗು ವಿವಿ ಉಳಿಸುವ ಬಗ್ಗೆ ಇಬ್ಬರು ಶಾಸಕರು ಗಮನಕ್ಕೆ ತಂದಿದ್ದಾರೆ. ವಿದ್ಯಾರ್ಥಿಗಳ ಅಭಿಪ್ರಾಯ ಅತೀ ಮುಖ್ಯವಾಗಿದ್ದು, ಅಧಿಕಾರಿಗಳು ವರದಿ ನೀಡಿದ್ದಾರೆ. ಆ ನಿಟ್ಟಿನಲ್ಲಿ ಮಕ್ಕಳ ಭವಿಷ್ಯ ಅತೀ ಮುಖ್ಯವಾಗಿದೆ. ಸರ್ಕಾರಕ್ಕೆ ಯಾವುದೇ ರೀತಿಯ ಪ್ರತಿಷ್ಠೆ ಇಲ್ಲ ಎಂದು ಹೇಳಿದರು. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಶುಭ ಹಾರೈಸಿದರು.
ಭಾಗಮಂಡಲ ಭಗಂಡೇಶ್ವರ ದೇವಾಲಯ ಆವರಣದಲ್ಲಿ ಪೂರ್ಣಕುಂಭದೊಂದಿಗೆ ಉಪ ಮುಖ್ಯಮಂತ್ರಿ ಅವರನ್ನು ಸ್ವಾಗತಿಸಲಾಯಿತು.