ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದ ಸೌಲಭ್ಯ ತಲುಪಿಸಲು ಅಗತ್ಯ ಕ್ರಮ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್….

ಜಿಲ್ಲೆಯಲ್ಲಿ 86 ಸಫಾಯಿ ಕರ್ಮಚಾರಿಗಳ ಗುರುತು

ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದ ಸೌಲಭ್ಯ ತಲುಪಿಸಲು ಅಗತ್ಯ ಕ್ರಮ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ , ಏ.03:-ಜಿಲ್ಲೆಯ ಸಫಾಯಿ ಕರ್ಮಚಾರಿಗಳು ಹಾಗೂ ಅವಲಂಬಿತ ಕುಟುಂಬಗಳಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ತಲುಪಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.

ದೇವನಹಳ್ಳಿ ತಾಲ್ಲೂಕಿನ ಅಂಬೇಡ್ಕರ್ ಭವನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಸಫಾಯಿ ಕರ್ಮಚಾರಿಗಳಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಮಾಹಿತಿ ಸಂಗ್ರಹಣೆ ಮತ್ತು ಅರಿವು ಮೂಡಿಸುವ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿ

ಸಮೀಕ್ಷೆಯಂತೆ ಜಿಲ್ಲೆಯಲ್ಲಿ 86 ಸಫಾಯಿ ಕರ್ಮಚಾರಿಗಳನ್ನು ಗುರ್ತಿಸಲಾಗಿದೆ. ಸಫಾಯಿ ಕರ್ಮಚಾರಿಗಳಿಗೆ ಪುನರ್ವಸತಿ ಕಲ್ಪಿಸಿ ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಸಫಾಯಿ ಕರ್ಮಚಾರಿಗಳು ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ನಿವೇಶನ ಹಂಚಿಕೆ, ವಸತಿ ಸೌಲಭ್ಯ, ಕುಟುಂಬದ ಮಕ್ಕಳಿಗೆ ಉಚಿತ ಶಿಕ್ಷಣ, ಸಾಲ ಸೌಲಭ್ಯ ಇನ್ನು ಮುಂತಾದ ಸರ್ಕಾರದ ವಿವಿಧ ಸೌಲಭ್ಯಗಳನ್ನು ತಲುಪಿಸಲಾಗುವುದು.

ಜಿಲ್ಲೆಯಲ್ಲಿ ಈಗಾಗಲೇ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಕಾರ್ಯಕ್ರಮ ರೂಪಿಸಲಾಗಿದ್ದು ನಿವೇಶನ ರಹಿತ ಅರ್ಹ ಸಫಾಯಿ ಕರ್ಮಚಾರಿ ಫಲಾನುಭವಿಗಳಿಗೆ ಮೊದಲ ಆದ್ಯತೆ ನೀಡಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗುವುದು. ಮನೆ ಇಲ್ಲದವರಿಗೆ ಶೀಘ್ರ ವಸತಿ ಮಂಜೂರಾತಿ ಮಾಡಲು ಜಿ.ಪಂ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು. ವಿವಿಧ ಇಲಾಖೆಗಳಲ್ಲಿ ತರಬೇತಿ ನೀಡುವ ಜೊತೆಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಡಲು ಸಾಲ ಸೌಲಭ್ಯ ನೀಡಲಾಗುವುದು. ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಸಾಕಷ್ಟು ಸೌಲಭ್ಯಗಳಿದ್ದು ಅರ್ಜಿ ಸಲ್ಲಿಸಿದರೆ, ಮೊದಲ ಆದ್ಯತೆಯಾಗಿ ಪರಿಗಣಿಸಿ ಶೀಘ್ರ ಯೋಜನೆಯ ಸೌಲಭ್ಯ ತಲುಪಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಚಂದ್ರಕಲಾ ಅವರು ಮಾತನಾಡಿ ಸಫಾಯಿ ಕರ್ಮಚಾರಿಗಳು ಒಂದೇ ಕೆಲಸಕ್ಕೆ ಮಾತ್ರ ಸೀಮಿತವಾಗದೆ ಮತ್ತೊಂದು ಕೆಲಸವನ್ನು ಅವಲಂಬಿಸಿ ಜೀವನವನ್ನು ಮತ್ತಷ್ಟು ಅಭಿವೃದ್ಧಿಯತ್ತ ಸಾಗಿಸಲು ಮುಂದಾಗಬೇಕು.

ಹಾಗಾಗಿ ಇಂದು ಎಲ್ಲಾ ಇಲಾಖೆಗಳಲ್ಲಿ ಇರುವ ಸವಲತ್ತುಗಳನ್ನು ಬಗ್ಗೆ ಮಾಹಿತಿ ನೀಡುವ ಸಲುವಾಗಿ ಒಂದೇ ಕಡೆ ಮಳಿಗೆಗನ್ನು ನಿರ್ಮಿಸಿ ಈ ಕಾರ್ಯಕ್ರಮವನ್ನು ನಡೆಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 86 ಸಫಾಯಿ ಕರ್ಮಚಾರಿಗಳ ಪೈಕಿ 10 ಜನ ಮರಣ ಹೊಂದಿದ್ದಾರೆ. ಅದೆಷ್ಟೋ ಸಫಾಯಿ ಕರ್ಮಚಾರಿಗಳಿಗೆ ಇಂದಿಗೂ ಸ್ವಂತ ಮನೆಗಳಿಲ್ಲ ಅವರುಗಿಗೆ ಮನೆ ಒದಗಿಸಬೇಕು.

ಹಾಗೆಯೇ ಕೌಶಲ್ಯ ಅಭಿವೃದ್ಧಿ ಇಲಾಖೆಯಿಂದ ತರಬೇತಿಗಳನ್ನು ಸಹ ನೀಡುತ್ತಿದ್ದಾರೆ ಈ ತರಬೇತಿಯಲ್ಲಿ ಪಾಲ್ಗೊಂಡು ಅದರ ಉಪಯೋಗವನ್ನು ಪಡೆದುಕೊಳ್ಳಬೇಕು. ನರೇಗಾ ಯೋಜನೆ ಕೆಲಸ ಇಲ್ಲದ ನಿರುದ್ಯೋಗಿಗಳಿಗೆ ನೂರು ದಿನಗಳ ಕೆಲಸ ನೀಡಿ ಅದಕ್ಕೆ ಸಂಬಳವನ್ನು ನೀಡುತ್ತಿದ್ದಾರೆ ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.

ವಿವಿಧ ಇಲಾಖೆಗಳಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಮಳಿಗೆಗಳನ್ನು ತೆರೆದು ಸರ್ಕಾರದ ಯೋಜನೆಗಳ ಬಗ್ಗೆ ಸಫಾಯಿ ಕರ್ಮಚಾರಿಗಳಿಗೆ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕುಮಾರ್, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ, ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕ ರಮೇಶ್, ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.